ಶಾಸಕರ ಮಾರಾಮಾರಿ: ಕಾಂಗ್ರೆಸ್ ನಿಂದ ಕಂಪ್ಲಿ ಶಾಸಕ ಗಣೇಶ್ ಅಮಾನತು

ಈಗಲ್ಟನ್ ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರನ್ನು....
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ - ಜೆಎನ್ ಗಣೇಶ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ - ಜೆಎನ್ ಗಣೇಶ್
ಬೆಂಗಳೂರು: ಈಗಲ್ಟನ್ ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರನ್ನು ಕಾಂಗ್ರೆಸ್ ನಿಂದ ಅಮಾನತುಗೊಳಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಗಣೇಶ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಆರೋಪ ಅತ್ಯಂತ ಗಂಭೀರವಾಗಿದ್ದು, ಪ್ರಕರಣದ ತನಿಖೆಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ ಎಂದು ಘೋರ್ಪಡೆ ಅವರು ಹೇಳಿದ್ದಾರೆ.
ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಕೃಷ್ಣ ಭೈರೇಗೌಡ ಅವರ ತನಿಖಾ ಸಮಿತಿಯ ಸದಸ್ಯರಾಗಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಘೋರ್ಪಡೆ ತಿಳಿಸಿದ್ದಾರೆ.
ಈ ಮಧ್ಯೆ, ಅಪೋಲೋ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಅವರ ಹೇಳಿಕೆ ಆಧರಿಸಿ ಬಿಡದಿ ಠಾಣೆ ಪೊಲೀಸರು ಕಂಪ್ಲಿ ಗಣೇಶ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
ಆಪರೇಷನ್ ಕಮಲದ ಭೀತಿಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಬಿಡದಿಯಲ್ಲಿನ ಈಗಲ್​ಟನ್ ರೆಸಾರ್ಟ್​ಗೆ ಜನವರಿ 19ರಂದು ಕರೆದೊಯ್ದಿತ್ತು. ಅದೇ ದಿನ ರಾತ್ರಿ ಶಾಸಕರ ಮಧ್ಯೆ ಮಾರಾಮಾರಿ ನಡೆದಿದೆ. ಆನಂದ್ ಸಿಂಗ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದರು. ಅವರ ತಲೆ, ಕಣ್ಣು ಮತ್ತು ಎದೆ ಭಾಗಕ್ಕೆ ತೀವ್ರ ಪೆಟ್ಟುಬಿದ್ದಿರುವುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com