ವಿಧಾನಸೌಧದ ಬಳಿ ಭದ್ರತೆ ಪರಿಶೀಲಿಸಿದ ಮುಖ್ಯಮಂತ್ರಿ ಎಚ್ ಡಿಕೆ, ಡಿಕೆಶಿ
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಬಂಡಾಯ ಶಾಸಕರು ಇಂದು ಸಂಜೆ ಆರು ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತಿತರರು ವಿಧಾನಸೌಧದ ಬಳಿ ಭದ್ರತೆಯನ್ನು ಪರಿಶೀಲಿಸಿದರು.
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಬಂಡಾಯ ಶಾಸಕರು ಇಂದು ಸಂಜೆ ಆರು ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತಿತರರು ವಿಧಾನಸೌಧದ ಬಳಿ ಭದ್ರತೆಯನ್ನು ಪರಿಶೀಲಿಸಿದರು.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಘಟಕದ ಉಪಾಧ್ಯಕ್ಷ ಪ್ರಸಾದ್ ಲಾಡ್ ಹಾಗೂ ಬಿಜೆಪಿ ಯುವ ಘಟಕದ ಮುಖ್ಯಸ್ಥ ಮೊಹಿತ್ ಕಾಂಬೊಜ್ ಕೂಡಾ ಕರ್ನಾಟಕದ ಬಂಡಾಯ ಶಾಸಕರೊಂದಿಗೆ ವಿಮಾನ ನಿಲ್ದಾಣದಲ್ಲಿದ್ದರು.
ನಿನ್ನೆ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಯತ್ನಿಸಿದ್ದ ಡಿಕೆ ಶಿವಕುಮಾರ್ ಅವರಿಗೆ ಮಹಾರಾಷ್ಟ್ರ ಪೊಲೀಸರು ಹೋಟೆಲ್ ಪ್ರವೇಶಿಸಲು ಅನುಮತಿ ನೀಡಿರಲಿಲ್ಲ. 17 ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ.
ಬಿಜೆಪಿ ಕುದುರೆ ವ್ಯಾಪಾರದ ಮೂಲಕ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿಯದಂತೆ ತಡೆಗಟ್ಟಲು ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.