ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಲಿಂಗಾಯತರಿಗೆ ಟಿಕೆಟ್ ಸಾಧ್ಯತೆ

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತು ಕೆಪಿಸಿಸಿ ಕಚೇರಿಯಲ್ಲಿಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ...
ಸಿದ್ದರಾಮಯ್ಯ ಸಭೆ
ಸಿದ್ದರಾಮಯ್ಯ ಸಭೆ
Updated on: 
ಬೆಂಗಳೂರು: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತು ಕೆಪಿಸಿಸಿ ಕಚೇರಿಯಲ್ಲಿಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಗಣೇಶ್ ಹುಕ್ಕೇರಿ, ಅಂಜಲಿ ಲಿಂಬಾಳ್ಕರ್, ಮಾಜಿ ಶಾಸಕ ಫಿರೋಜ್ ಸೇಠ್ ಸೇರಿದಂತೆ ಇತರೆ ಜಿಲ್ಲಾ ಪ್ರಮುಖರು ಭಾಗವಹಿಸಿದ್ದರು. ಆದರೆ ಶಾಸಕ ರಮೇಶ್ ಜಾರಕಿಹೊಳಿ ಸಭೆಯಿಂದ ದೂರ ಉಳಿದಿದ್ದರು. 
ಚಿಕ್ಕೋಡಿಯಿಂದ ಸಂಸದ ಪ್ರಕಾಶ್ ಹುಕ್ಕೇರಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಬೆಳಗಾವಿ  ಕ್ಷೇತ್ರಕ್ಕೆ ಆಯ್ಕೆ ನಡೆಯಬೇಕಿದೆ.
ಬೆಳಗಾವಿ ಕ್ಷೇತ್ರದಲ್ಲಿ ಸತತ ಮೂರು ಚುನಾವಣೆಗಳಲ್ಲಿ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ,  ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂದು ಪಣತೊಟ್ಟಿದೆ. ಹೀಗಾಗಿ ಈ ಬಾರಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹುಡುಕಾಟ ನಡೆಸಿದೆ. 
ಬೆಳಗಾವಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚಾಗಿದ್ದು, ಚನ್ನರಾಜ ಹೆಬ್ಬಾಳ್ಕರ್, ಅಂಜಲಿ ಲಿಂಬಾಳ್ಕರ್, ನಾಗರಾಜ್ ಯಾದವ್, ವಿವೇಕ್ ರಾವ್ ಪಾಟೀಲ್, ರಮೇಶ್ ಜಾರಕಿಹೊಳಿ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 
ಕ್ಷೇತ್ರದಲ್ಲಿ ಮರಾಠ ಹಾಗೂ ಲಿಂಗಾಯತ ಸಮುದಾಯದ ಮತಗಳು ಹೆಚ್ಚಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಇವುಗಳ ಪೈಕಿ  ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ ಕ್ಷೇತ್ರಗಳಲ್ಲಿ ಮರಾಠಿಗರು ಪ್ರಬಲರಾಗಿದ್ದಾರೆ. ಇವುಗಳ ಜೊತೆ ಕಾಂಗ್ರೆಸ್ ಸಾಂಪ್ರದಾಯಿಕ ಮತಗಳು ಸೇರಿದರೆ ಗೆಲುವು  ಸುಲಭ ಎಂಬ ಲೆಕ್ಕಚಾರ ಪಕ್ಷದ ನಾಯಕರದ್ದಾಗಿದೆ.
2014 ರಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಎದುರು ಲಕ್ಷ್ಮೀ ಹೆಬ್ಬಾಳಕರ್ ಸೋಲು ಅನುಭವಿಸಿದ್ದು, 2018 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕಿಯಾಗಿದ್ದಾರೆ. ಹೀಗಾಗಿ 2019 ರ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. 
ಮೊದಲಿಗೆ ಮರಾಠ ಅಭ್ಯರ್ಥಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು,  ಖಾನಾಪುರ ಶಾಸಕಿ ಅಂಜಲಿ ಲಿಂಬಾಳ್ಕರ್ ಹೆಸರು ಮುನ್ನಲೆಗೆ ಬಂದಿತ್ತು. ಆದರೆ ಸಭೆಯಲ್ಲಿ ಅಂಜಲಿ ಪ್ರಸ್ತಾಪಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದ್ದು, ಪಿ.ಎಂ.ಅಶೋಕ್ ಅವರಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಶಿಫಾರಸು ಮಾಡಿದ್ದಾರೆ. ಇತ್ತ ಸಚಿವ ರಮೇಶ್ ಜಾರಕಿಹೊಳಿ ಅವರು ಶಶಿಕಾಂತ್ ಸಿದ್ನಾಳ್ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.  
ಹೀಗಾಗಿ ಮರಾಠ ಅಭ್ಯರ್ಥಿಯನ್ನು ಬಿಟ್ಟು ಈ ಬಾರಿ ಲಿಂಗಾಯತ ಅಭ್ಯರ್ಥಿಯನ್ನು ಬೆಳಗಾವಿಯಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದ್ದು, ಶಶಿಕಾಂತ್ ಸಿದ್ನಾಳ್, ಪಿಎಂ. ಅಶೋಕ್ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವುದು ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಭೆ ಬಳಿಕ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕಳೆದ ಬಾರಿ ತಾವು ಮೋದಿ ಅಲೆಯಲ್ಲಿಯೂ 4 ಲಕ್ಷ  ಮತಗಳನ್ನು ಪಡೆದಿದ್ದೆ. ಈಗ ಶಾಸಕಿಯಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. ಪಕ್ಷದ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಕುರಿತು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು  ಹಾಗೂ ತಮ್ಮ ಸಹೋದರ ಬದ್ಧ ಎಂದರು. 
ಜಿಲ್ಲಾ  ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ,  'ಅಂಜಲಿ  ನಿಂಬಾಳ್ಕರ ಅವರಾಗಿಯೇ ಟಿಕೆಟ್ ಕೇಳಿಲ್ಲ. ಆದರೆ, ಅವರ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ  ಚಿಂತನೆ ನಡೆದಿದ್ದು ನಿಜ. ಸದ್ಯದಲ್ಲೇ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದು ಅಂತಿಮಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com