
ಶೃಂಗೇರಿ: ರಾಜ್ಯಕ್ಕೆ ಅಂಬರೀಷ್ ಕೊಡುಗೆ ಏನು ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಂಬಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ರಾಜಕಾರಣ ತೀವ್ರ ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಸುಮಲತಾ ಅವರನ್ನು ಬಿಜೆಪಿ ಬೆಂಬಲಿಸಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆ ನೀಡಿರುವುದು ಪರೋಕ್ಷವಾಗಿ ಸುಮಲತಾ ಅವರನ್ನು ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಶೃಂಗೇರಿಯ ಶಾರದಾ ಮಠಕ್ಕೆ ಭೇಟಿ ನೀಡಿದ್ದ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬರೀಷ್ ಜೀವಂತವಿದ್ದಾಗ ಅವರ ಬಗ್ಗೆ ತುಂಬ ಅಭಿಮಾನವಿತ್ತು ಎಂದು ಹೇಳಿಕೊಂಡಿದ್ದವರು ಈಗ ಇಂತಹ ಹೇಳಿಕೆ ನೀಡಿದ್ದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ, ಶೋಭಾ ಕರಂದ್ಲಾಜೆ ಅವರೇ ಸ್ಪರ್ಧಿಸಲಿದ್ದು, ಭಾರಿ ಅಂತರದಲ್ಲಿ ಅವರು ಜಯಗಳಿಸಲಿದ್ದಾರೆ.ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Advertisement