ಉಪಚುನಾವಣೆ ಬಿಜೆಪಿ ಗೆಲುವಿನಿಂದ ಕಾಂಗ್ರೆಸ್, ಜೆಡಿಎಸ್ ದುರ್ಬಲತೆ ಬಹಿರಂಗ

ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಗೆಲುವಿನ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ದುರ್ಬಲತೆ ಇದೀಗ ಬಹಿರಂಗಗೊಂಡಂತಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಗೆಲುವಿನ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ದುರ್ಬಲತೆ ಇದೀಗ ಬಹಿರಂಗಗೊಂಡಂತಾಗಿದೆ. 

ಉಪಚುನಾವಎಣೆಯಲ್ಲಿ ಜೆಡಿಎಸ್ ಶೂನ್ಯ ಸಂಪಾನೆ ಮಾಡಿದ್ದು, ಭಾರೀ ಹಿನ್ನಡೆ ಅನುಭವಿಸಿದೆ. ತನ್ನ ಪ್ರಾಬಲ್ಯ ಇರುವ ಹಳೇ ಮೈಸೂರು ಭಾಗದ ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ನಾಯಕರ ಒಗ್ಗಟ್ಟಿನ ಕೊರತೆಯಿಂದಾಗಿ ಕಳೆದುಕೊಳ್ಳುವಂತಾಗಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ ಮಹಾಲಕ್ಷ್ಮೀ ಲೇಔಟ್, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ. ಈ ಮೂಲಕ ಜೆಡಿಎಸ್ ತನ್ನ ಹಿಡಿತದಲ್ಲಿದ್ದ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. 

ಅಥಣಿ ಮತ್ತು ಹಿರೇಕೆರೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳು ಕೊನೆ ಕ್ಷಣದಲ್ಲಿ ನಾಮಪತ್ರಿ ವಾಪಸ್ ತೆಗೆದುಕೊಂಡಿದ್ದರು. ಹೀಗಾಗಿ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿತ್ತು. 

ಈ ಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದೇ ತಮ್ಮ ಗುರಿ ಎಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗವಾಗಿದೆ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಾಗಿ ಪ್ರಚಾರ ನಡೆಸುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ. ಬಹುತೇಕ ಎಲ್ಲಾ ಕ್ಷೇತ್ರದಲ್ಲಿಯೂ ಕುಮಾರಸ್ವಾಮಿ ಬಿರುಸಿನ ಪ್ರಚಾರ ನಡೆಸಿದರು. ಆದರೆ, ಯಾವುದೇ ಕ್ಷೇತ್ರದಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗದೆ ತೀವ್ರ ನಿರಾಸೆಯನ್ನುಂಟು ಮಾಡಿದ್ದಾರೆ. 

ಕೆ.ಆರ್.ಪೇಟೆ ಮತ್ತು ಯಶವಂತಪುರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಎರಡನೇ ಸ್ಥಾನದಲ್ಲಿದ್ದರೆ, ಇನ್ನುಳಿದ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಅಲ್ಲದೆ, ಉತ್ತಮ ಮತಗಳನ್ೇನು ಪಡೆಯುವಲ್ಲಿಯೂ ಪಕ್ಷದ ಅಭ್ಯರ್ಥಿಗಳು ವಿಫಲವಾಗಿದ್ದಾರೆ. ಹೀಗಾಗಿ ಜೆಡಿಎಸ್ ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ ಅನಿವಾರ್ಯತೆ ಇದೆ. ಮತ ಎಣಿಕೆ ಆರಂಭದಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಬಿ.ಎಲ್.ದೇವರಾಜ್ ಮತ್ತು ಯಶವಂತಪುರ ಕ್ಷೇತ್ರದ ಜವರಾಯಿಗೌಡ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ, ನಂತರದ ಸುತ್ತಿನಲ್ಲಿ ಹಿನ್ನಡೆ ಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. 

ಉಪಚುನಾವಣಾ ಫಲಿತಾಂಶ ಬಿಜೆಪಿ ಕುರಿತ ಸಮೀಕರಣವನ್ನು ಪರಿಣಾಮಕಾರಿಯಾಗಿ ಬದಲಾಯಿಸಿದೆ. ಪ್ರಮುಖವಾಗಿ ಬೆಂಗಳೂರು ನಗರದಲ್ಲಿ. ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅದೂ ಅಲ್ಲದೆ, ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಹಾಗೂ ಕೆ.ಆರ್.ಪೇಟೆಯಲ್ಲಿಯೂ ಖಾತೆ ತೆರೆದಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಬಿಜೆಪಿ ಪರ ಟ್ರೆಂಡ್ ಆರಂಭವಾಗಿದೆ. ಕಳೆದೆರಡು ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಿಕ್ಕಾಟದಲ್ಲಿಯೇ ಕಾಲ ಕಳೆಯುತ್ತಿದೆ. ಇದು ಉಪಚುನಾವಣಾ ಫಲಿತಾಂಶದಲ್ಲಿಯೂ ಬಹಿರಂಗಗೊಂಡಿದೆ ಎಂದು ರಾಜಕೀಯ ತಜ್ಞ ಪ್ರೊ.ಹರೀಶ್ ರಾಮಸ್ವಾಮಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com