ಸಿದ್ದರಾಮಯ್ಯ ಯೂ ಟರ್ನ್ : ರಾಜೀನಾಮೆ ವಾಪಸ್ ಪಡೆಯಲು ಸಹಮತ?

ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದು, ಒಂದು ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದು, ಒಂದು ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ ಹದಿನೈದು ದಿನ ಕಳೆದರೂ ಹೈಕಮಾಂಡ್‌ ಸ್ವೀಕರಿಸಿದೇ ಹಾಗೆಯೇ ಉಳಿಸಿಕೊಂಡಿತ್ತು. ಅಲ್ಲದೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನದ ಕುರಿತು ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲು ಮಧುಸೂಧನ ಮಿಸ್ತ್ರಿ ಅವರನ್ನು ಕಳುಹಿಸಿಕೊಟ್ಟಿತ್ತು.

ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲು ದೆಹಲಿಯಿಂದ ಆಗಮಿಸಿದ್ದ ಮಧುಸೂಧನ ಮಿಸ್ತ್ರಿ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಮೊದಲು ಅವರ ರಾಜೀನಾಮೆಯನ್ನು ಹಿಂಪಡೆಯುವಂತೆ ಮನವೊಲಿಸುವ ಯತ್ನ ಮಾಡಿದ್ದರು. ಆದರೆ, ಸಿದ್ದರಾಮಯ್ಯ ರಾಜ್ಯದಲ್ಲಿ ಪಕ್ಷದ ಹಿರಿಯ ನಾಯಕರ ಅಸಹಕಾರ ತೋರುತ್ತಿರುವುದರಿಂದ ಪಕ್ಷ ಸಂಘಟನೆ ಮಾಡುವುದು ಕಷ್ಟ ಎಂದು ಬೇಸರ ವ್ಯಕ್ತಪಡಿಸಿ, ಬೇರೆಯವರಿಗೆ ಜವಾಬ್ದಾರಿ ವಹಿಸಿದರೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮಿಸ್ತ್ರಿ ಅವರಿಗೆ ಸಿದ್ದರಾಮಯ್ಯ ಹೇಳಿದ್ದರು ಎಂದು ತಿಳಿದು ಬಂದಿದೆ.

ಆ ನಂತರ ಕುಮಾರಕೃಪ ಅತಿಥಿಗೃಹದಲ್ಲಿ ಮಧುಸೂಧನ ಮಿಸ್ತ್ರಿಅವರು ಪಕ್ಷದ ಹಿರಿಯ ನಾಯಕರೊಂದಿಗೆ ಒನ್‌ ಟು ಒನ್‌ ಸಭೆ ನಡೆಸಿದ ಸಂದರ್ಭದಲ್ಲಿ ಬಹುತೇಕ ನಾಯಕರು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಮಧುಸೂಧನ ಮಿಸ್ತ್ರಿ, ಸಿದ್ದರಾಮಯ್ಯ ರಾಜೀನಾಮೆ ವಾಪಸ್‌ ಪಡೆಯಲು ನಿರಾಕರಿಸಿದ್ದಾರೆ ಎಂದು ಹೇಳಿದರು ಎನ್ನಲಾಗಿದ್ದು, ಅವರ ಮನವೊಲಿಸಲು ಹತ್ತು ದಿನ ಸಮಯ ನೀಡುವಂತೆ ಮನವಿ ಮಾಡಿದ್ದರು. ಆದರೆ, ಮಿಸ್ತ್ರಿ, ಒಂದು ಗಂಟೆ ಮಾತ್ರ ಸಮಯ ನೀಡಿ ಅವರ ಅಭಿಪ್ರಾಯ ತಿಳಿದುಕೊಂಡು ಮಾಹಿತಿ ನೀಡುವಂತೆ ಸಿದ್ದರಾಮಯ್ಯ ಪರ ವಾದ ಮಾಡಿದ್ದ ನಾಯಕರಿಗೆ ಸೂಚಿಸಿದ್ದರು ಎನ್ನಲಾಗಿದೆ.

ಹೀಗಾಗಿ ಶುಕ್ರವಾರ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್‌, ಎಸ್‌.ಆರ್‌.ಪಾಟೀಲ್‌, ಈಶ್ವರ್‌ ಖಂಡ್ರೆ, ವಿ.ಎಸ್‌.ಉಗ್ರಪ್ಪ, ಎಚ್‌.ಎಂ.ರೇವಣ್ಣ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಮತ್ತು ಸಂಸದರು ಶುಕ್ರವಾರ ತಡ ರಾತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ರಾಜೀನಾಮೆಯನ್ನು ವಾಪಸ್‌ ಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಸಿದ್ದರಾಮಯ್ಯ ಅವರ ಒತ್ತಡಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಒಂದು ವಾರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿ ಅಧಿಕೃತವಾಗಿ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ವಾಪಸ್‌ ಪಡೆಯುವ ಬಗ್ಗೆ ಸಹಮತ ವ್ಯಕ್ತಪಡಿದ್ದಾರೆ ಎನ್ನುವ ಸಂದೇಶವನ್ನು ಮಧುಸೂಧನ ಮಿಸ್ತ್ರಿ ಮೂಲಕ ಹೈಕಮಾಂಡ್‌ಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com