ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿತಿಯ ವಾತಾವರಣ: ಆರ್.ಅಶೋಕ್

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ನಾಯಕ ಆರ್ ಆಶೋಕ್ ಕಿಡಿಕಾರಿದ್ದಾರೆ.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ನಾಯಕ ಆರ್ ಆಶೋಕ್ ಕಿಡಿಕಾರಿದ್ದಾರೆ.
ಇತ್ತೀಚೆಗಿನ ಪತ್ರಕರ್ತರ ಬಂಧನ ಪ್ರಹಸನವನ್ನು ವಿರೋಧಿಸಿ ಇಂದು ಬಿಜೆಪಿ ನಾಯಕರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ್‌ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿಕಾರಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರ್ ಅಶೋಕ್ ಅವರು, 'ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿಯ ವಾತಾವರಣ ನಿರ್ಮಾಣವಾಗುತ್ತದೆ. ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ' ಎಂದು ಹೇಳಿದರು.
'ರಾಜ್ಯದಲ್ಲಿ ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ. ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸುತ್ತಿದೆ. ಪ್ರಧಾನಿಯವರನ್ನು ಗುಂಡಿಟ್ಟು ಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ಧ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಬರೆದ ಕಾರಣಕ್ಕೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದೆ ಎಂದು ಕಿಡಿಕಾರಿದರು. 
ಇದೇ ವೇಳೆ ಸಿಎಂ  ಎಚ್ ಡಿಕೆ ವಿರುದ್ಧವೂ ಕಿಡಿಕಾರಿದ ಆರ್ ಆಶೋಕ್, 'ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ಮಾಧ್ಯಮದವರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದರೆ ನಾವು ಹೊಣೆಯಲ್ಲ ಎಂದು ಹೇಳಿಕೆ ನೀಡಿದ ನಂತರ ದೌರ್ಜನ್ಯ ಹೆಚ್ಚಾಗಿವೆ. ಇದು ಇವತ್ತಲ್ಲ ನಾಳೆ ನಿಮಗೆ ತಿರುಗುಬಾಣ ಆಗುತ್ತದೆ. ಮಾಡಿದ್ದುಣ್ಣೋ ಮಾರಾಯ ಎಂಬಂತೆ ಆಗುತ್ತದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್‌ ರಾಜ್ಯದಲ್ಲಿ ಎರಡಂಕಿ ಕೂಡ ದಾಟುವುದಿಲ್ಲ. ಇದನ್ನು ನಾವು ಹೇಳುತ್ತಿಲ್ಲ. ಗುಪ್ತಚರ ಮತ್ತು ಮಾಧ್ಯಮಗಳ ವರದಿಗಳೇ ಹೇಳುತ್ತಿವೆ. ಸರ್ಕಾರ ಇದೇ ರೀತಿಯ ಪಕ್ಷಪಾತ ಧೋರಣೆ ಮುಂದುವರಿಸಿದರೆ ಪ್ರಜಾಪ್ರಭುತ್ವ ಉಳಿಸಿ ಎಂಬ ಅಭಿಯಾನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. 
ಬಳಿಕ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ ನಾರಾಯಣ ಮಾತನಾಡಿ, 'ಹಿಂದೆ ತುರ್ತು ಪರಿಸ್ಥಿತಿ ಹೇರಿದ ಕಾರಣಕ್ಕೆ ಮಾಜಿ ಪ್ರದಾನಿ ಇಂದಿರಾಗಾಂಧಿಗೆ ಏನಾಯಿತು ಎಂಬುದು ಗೊತ್ತಿದೆಯಲ್ಲಾ. ಎಂ.ಬಿ.ಪಾಟೀಲರೂ ಈಗ ಅದೇ ರೀತಿ ಗೃಹ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಇಸ್ಲಾಮಿಕ್ ಸ್ಟೇಟ್ ಉಗ್ರರು ಬೆಂಗಳೂರಿಗೆ ಬಂದಿರುವ ಮಾಹಿತಿ ಇದೆ. ಗೃಹ ಸಚಿವರು, ಮೊದಲು ಅವರ ಬಗ್ಗೆ ಗಮನಕೊಡುವುದು ಬಿಟ್ಟು, ಬಿಜೆಪಿ ಕಾರ್ಯಕರ್ತರ ಕಡೆಗೆ ತಿರುಗಿದ್ದೀರಿ ಎಂದು ಕಿಡಿಕಾರಿದರು.
'ಗೃಹ ಸಚಿವರಾಗಿ ನೀವು ಶಾಶ್ವತವಾಗಿ ಇರುವುದಿಲ್ಲ. ನೀವೂ ಮಾಜಿ ಆಗುತ್ತೀರಿ. ಆಗ ನಿಮ್ಮ ಪರಿಸ್ಥಿತಿ ಏನಾಗುತ್ತದೆ ಯೋಚಿಸಿ. ನಿಮ್ಮ ಧೋರಣೆ ಮುಂದುವರಿದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಬೇಕಾಗುತ್ತದೆ. ನೀವು ಯಾವ ಕಾರ್ಯಕ್ರಮಕ್ಕೆ ಹೋದರೂ ನಾವು ಕಪ್ಪುಬಾವುಟ ಪ್ರದರ್ಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಳಿಕ ತೇಜಸ್ವಿನಿ ಅನಂತಕುಮಾರ್ ಅವರು ಮಾತನಾಡಿ, ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲದಂತಾಗಿದೆ. ಮಹಿಳೆಯರನ್ನೂ ಪೊಲೀಸರು ಬಂಧಿಸಿ ಸುಖಾಸುಮ್ಮನೆ ಗಂಟೆಗಟ್ಟಲೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಳ್ಳುತ್ತಿದ್ದಾರೆ. ಒಂದು ರೀತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ರೀತಿಯ ಅನ್ಯಾಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಇನ್ನು ಪ್ರತಿಭಟನೆಯಲ್ಲಿ ಸಂಸದ ಪಿ.ಸಿ.ಮೋಹನ್, ಮುಖಂಡರಾದ ಶಿವರಾಂ, ಚಿ.ನಾ.ರಾಮು, ನಗರ ಬಿಜೆಪಿ ಅಧ್ಯಕ್ಷ ಪಿ.ಎನ್. ಸದಾಶಿವ ಮತ್ತಿತರರು ಪಾಲ್ಗೊಂಡಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಎಸ್ ಆರ್ ಪಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯಿಂದಾಗಿ ಮೈಸೂರು ರಸ್ತೆ, ಅರಮನೆ ರಸ್ತೆ ಸೇರಿದಂತೆ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com