ರೋಷನ್ ಬೇಗ್ ಹೇಳಿಕೆ ಬೆನ್ನಲ್ಲೆ ಮುಖ್ಯಮಂತ್ರಿ ಜೊತೆ ಕಾಂಗ್ರೆಸ್ ನಾಯಕರ ಮಹತ್ವದ ಸಭೆ

ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೊತೆ ಖಾಸಗಿ ಹೋಟೇಲಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೊತೆ ಖಾಸಗಿ ಹೋಟೇಲಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನಗರದ ಖಾಸಗಿ ಹೋಟೆಲಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅಂತೆಯೇ ಲೋಕಸಭಾ ಚುನಾವಣೆ ಮತಗಟ್ಟೆ ಸಮೀಕ್ಷಾ ವರದಿಗಳು, ರಾಜ್ಯದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದ ಬೆಳವಣಿಗೆ ,ರಮೇಶ್ ಜಾರಕಿಹೊಳಿ ನಡೆ ,ರೋಷನ್ ಬೇಗ್ ಹೇಳಿಕೆ , ಮೇ 23ರ ಫಲಿತಾಂಶದಿಂದ ಪಕ್ಷ ಹಾಗೂ ಸರ್ಕಾರದಲ್ಲಿ ಕಂಡು ಬರಬಹುದಾದ ಗೊಂದಲ ಹಾಗೂ ಅಸಮಧಾನಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.
ಇನ್ನು ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರೋಹಷನ್ ಬೇಗ್, ತಮ್ಮದೇ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೇರವಾಗ್ದಾಳಿ ನಡೆಸಿದ್ದ ರೋಷನ್ ಬೇಗ್ ಅವರು, 'ಲೋಕಸಭಾ ಚುನಾವಣೆಯ ಟಿಕೆಟ್ ಕೊಡುವಾಗಲೇ ನಾನು ಅಸಮಾಧಾನ ವ್ಯಕ್ತಪಡಿಸಿದ್ದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಸೀಟ್ ಕೊಟ್ಟಿರಲಿಲ್ಲ. ಈ ಹಿಂದೆ ಅಲ್ಪಸಂಖ್ಯಾತರಿಗೆ ಮೂರು ಟಿಕೆಟ್ ಕೊಡುತ್ತಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಈ ಎರಡೂ ಸಮುದಾಯದವರನ್ನು ಕಡೆಗಣಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ದುರಹಂಕಾರದಿಂದ ಈ ರೀತಿ ಫಲಿತಾಂಶ ಬರುತ್ತಿದೆ. ಎಚ್‌.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಹೋಗಿ ಅವರನ್ನು ಮುಖ್ಯಮಂತ್ರಿ ಮಾಡಿದರು. ಆನಂತರ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದನ್ನೆಲ್ಲ ಜನರು ಗಮನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
ರೋಷನ್ ಬೇಗ್ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದ್ದು, ಬೇಗ್ ಬಿಜೆಪಿ ಸೇರುವ ಕುರಿತ ಸುದ್ದಿಗೆಳು ದಟ್ಟವಾಗಿ ಹರಿದಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com