ಅನರ್ಹ ಶಾಸಕರನ್ನು ಮುಂಬೈನಲ್ಲಿಟ್ಟಿದ್ದು ಅಮಿತ್ ಶಾ: ಬಿಎಸ್ ವೈ ವಿಡಿಯೋ ವೈರಲ್, ಸುಪ್ರೀಂಗೆ ಸಲ್ಲಿಸಲು ಕಾಂಗ್ರೆಸ್, ಜೆಡಿಎಸ್  ನಿರ್ಧಾರ

ಕಾಂಗ್ರೆಸ್ - ಜೆಡಿಎಸ್ ನ ಅನರ್ಹ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿಟ್ಟಿದ್ದು ಸ್ವತಃ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು...
ಅಮಿತ್ ಶಾ - ಬಿಎಸ್ ವೈ
ಅಮಿತ್ ಶಾ - ಬಿಎಸ್ ವೈ

ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ನ ಅನರ್ಹ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿಟ್ಟಿದ್ದು ಸ್ವತಃ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಸಭೆಯಲ್ಲಿ ಹೇಳಿರುವ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

ಸಿಎಂ ಯಡಿಯೂರಪ್ಪ ಅವರ ಈ ಹೊಸ ವಿಡಿಯೋ ಇಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಗೆ ಈ ವಿಡಿಯೋ ಸಲ್ಲಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅಲ್ಲದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಸಹ ಈ ವಿಡಿಯೋವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ.ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಮ್ ಕೋರ್ಟ್‌ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ವಿಡಿಯೋದಲ್ಲಿ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಅವರು ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೇ ಮುಂದೆ ನಿಂತು 17 ಶಾಸಕರನ್ನು 2-3 ತಿಂಗಳು ಮುಂಬೈಯಲ್ಲಿರಿಸಿದ್ದರು. ಅವರೆಲ್ಲರೂ ಕ್ಷೇತ್ರಕ್ಕೂ ಬರಲಿಲ್ಲ. ಹೆಂಡ್ತಿ ಮಕ್ಕಳ ಮುಖ ನೋಡಿರಲಿಲ್ಲ. 3-4 ವರ್ಷ ವಿಪಕ್ಷದಲ್ಲಿ ಇರಬೇಕಾದ ನಮ್ಮನ್ನ ಆಡಳಿತ ಪಕ್ಷಕ್ಕೆ ಬರುವಂತೆ ಮಾಡಿದರು. ನಿಮ್ಮ ಬಾಯಲ್ಲಿ ಅನರ್ಹ ಪರ ಗಟ್ಟಿಯಾಗಿ ನಿಂತುಕೊಳ್ತೇವೆ ಅನ್ನೋ ಮಾತು ಬರಲಿಲ್ಲ. ಇದನ್ನ ನಾನು ಖಂಡಿತಾ ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ. ಐ ಆಮ್ ಸಾರಿ. ನನಗೇನು ಸಿಎಂಗಿರಿ ಬೇಕಾಗಿರಲಿಲ್ಲ. ಈಗಾಗಲೇ 3-4 ಬಾರಿ ಸಿಎಂ ಆಗಿದ್ದೇನೆ. ದೊಡ್ಡತನ ಧಾರಾಳತನ, ವಾಸ್ತವ್ಯ ಸ್ಥಿತಿಯನ್ನ ತಿಳಿಯದೇ ನೀವು ಮಾತಾಡಿದ್ದೀರಾ ಗೋಕಾಕ್ ಬಗ್ಗೆ ನೀವೇಕೆ ಮಾತಾಡಿಲ್ಲ? ಅದರಲ್ಲಿ ಅಂತಹ ವಿಶೇಷ ಏನಿದೆ? ಅವರನ್ನೆಲ್ಲಾ ನಂಬಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತು ನಾನು ಅಪರಾಧ ಮಾಡಿದ್ದೇನೆ ಅಂತ ಈಗ ಅನ್ನಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com