ಎಲ್ಲಾ 17 ಅನರ್ಹ ಶಾಸಕರು ನಾಳೆ ಬೆಳಗ್ಗೆ 10.30ಕ್ಕೆ ಬಿಜೆಪಿ ಸೇರ್ಪಡೆ: ಡಿಸಿಎಂ ಅಶ್ವತ್ಥ ನಾರಾಯಣ

ಅನರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ....
ಅನರ್ಹ ಶಾಸಕರು
ಅನರ್ಹ ಶಾಸಕರು

ನವದೆಹಲಿ: ಅನರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಎಲ್ಲಾ 17 ಅನರ್ಹ ಶಾಸಕರು ನವೆಂಬರ್ 14ರಂದು ಬಿಜೆಪಿ ಸೇರಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಬುಧವಾರ ಹೇಳಿದ್ದಾರೆ.

ಅನರ್ಹ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸುತ್ತಿದ್ದು, ಈ ಸಂಬಂಧ ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥ ನಾರಾಯಣ ಅವರು, ಎಲ್ಲಾ ಅನರ್ಹ ಶಾಸಕರು ನಾಳೆ ಬೆಳಗ್ಗೆ 10.30ಕ್ಕೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದರು.

ಡಿಸೆಂಬರ್ 5ರಂದು ನಡೆಯುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.

ಅಶ್ವತ್ಥ ನಾರಾಯಣ ಅವರು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಗೊಂಡ ನಂತರ ಅನರ್ಹ ಶಾಸಕರೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಡಿಸಿಎಂ, ಪಕ್ಷದ ನಾಯಕರು, ಅನರ್ಹ ಶಾಸಕರು ನಾಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಇಷ್ಟಪಟ್ಟು ನಾವೆಲ್ಲರೂ ನಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರುತ್ತಿದ್ದೇವೆ ಎಂದು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ.

‘ಡಕಾಯಿತರೇ ಸಚಿವರಾಗುತ್ತಾರೆ. ಅಂಥದ್ದರಲ್ಲಿ ನಾವು ಸಚಿವರಾಗುವುದು ಬೇಡವೇ. ನಮ್ಮನ್ನು  ಅನರ್ಹಗೊಳಿಸಿದ ಸ್ಪೀಕರ್‌ ಆದೇಶದ ಬಗ್ಗೆ ಮೊದಲಿನಿಂದಲೂ ಆಕ್ಷೇಪಗಳಿದ್ದವು. ಪಕ್ಷದ ಸದಸ್ಯತ್ವ ಪಡೆದುಕೊಂಡ ನಂತರ ಅನರ್ಹರಿಗೆ ಟಿಕೆಟ್ ಕೊಡಬೇಕೇ ಬೇಡವೇ ಎಂಬ ಬಗ್ಗೆ ಬಿಜೆಪಿ ನಾಯಕರು ನಿರ್ಧರಿಸಲಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com