ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್: ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್ ದೂರು ದಾಖಲು 

ದಿನದಿಂದ ದಿನಕ್ಕೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್ ಆಗಿದೆ. 
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

ಬೆಂಗಳೂರು; ದಿನದಿಂದ ದಿನಕ್ಕೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್ ಆಗಿದೆ.


ಗೋವಿಂದ ಕಾರಜೋಳ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೆಪಿಸಿಸಿ, ಕಾರಜೋಳ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದೆ.


ಗೋವಿಂದ ಕಾರಜೋಳ ಅವರು ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುವ ವಿಡಿಯೊ ದಾಖಲಾಗಿದೆ. ಇದು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ದೂರಿನಲ್ಲಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ದೃಶ್ಯವನ್ನು ಪ್ರಸಾರ ಮಾಡದಂತೆ ಮಾಧ್ಯಮ ಪ್ರತಿನಿಧಿಗಳಲ್ಲಿ ಗೋವಿಂದ ಕಾರಜೋಳ ಅವರು ಮನವಿ ಮಾಡಿಕೊಳ್ಳುತ್ತಿರುವ ದೃಶ್ಯ ಈ ವಾರದ ಆರಂಭದಲ್ಲಿ ಪ್ರಸಾರವಾಗಿದೆ.


ಬಿಜೆಪಿ ಅಭ್ಯರ್ಥಿ ಅಥಣಿ ಕ್ಷೇತ್ರದ ಮಹೇಶ್ ಕುಮಟಳ್ಳಿ ಅವರ ನಿವಾಸದಲ್ಲಿ ಹಣ ಹಂಚಿಕೆ ಮಾಡುತ್ತಿರುವಾಗ ತೆಗೆದ ವಿಡಿಯೊವಾಗಿದ್ದು, ಮತದಾರರಿಗೆ ಹಣ ಹಂಚಿಕೆ ಮಾಡಿ ಕುಮಟಳ್ಳಿ ಪರ ಮತ ಹಾಕುವಂತೆ ಜನರ ಮನವೊಲಿಸಲು ಮಾಡುತ್ತಿರುವ ತಪ್ಪು ಕೆಲಸವಿದು ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com