ಮಹಾರಾಷ್ಟ್ರ, ಹರಿಯಾಣ ಚುನಾವಣೆ ಫಲಿತಾಂಶ: ಹೆಚ್.ಡಿ.ಕೆ., ಸಿದ್ದರಾಮಯ್ಯ ಏನಂದ್ರು ಅಂದ್ರೆ...

ಒಂದು ರಾಜ್ಯದ ಚುನಾವಣಾ ಫಲಿತಾಂಶ ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯತಿರಿಕ್ತವಾದ ಪ್ರತಿಕ್ರಿಯೆ ನೀಡಿದ್ದಾರೆ.
ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ
ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ

ಬೆಂಗಳೂರು:  ಒಂದು ರಾಜ್ಯದ ಚುನಾವಣಾ ಫಲಿತಾಂಶ ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯತಿರಿಕ್ತವಾದ ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದರು.

ನಗರದಲ್ಲಿಂದು ಎರಡೂ ರಾಜ್ಯಗಳ ಫಲಿತಾಂಶ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷಾಂತರಿಗೆ ಜನರು ತಕ್ಕ ಪಾಠ ಕಲಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಪಕ್ಷ ಗಳಿಸಲಿದೆ. ಸುಪ್ರೀಂಕೋರ್ಟ್ ತೀರ್ಪಿನ್ನು ನೋಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಥಿತಿ ಉದ್ಭವಿಸಲುಬಹುದು. ಶಾಸಕರ ಕುದುರೆ ವ್ಯಾಪಾರದಿಂದಾಗಿ ಉಪಚುನಾವಣೆ ಎದುರಾಗಿದೆ.

ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಿದ್ದರೂ ಸರ್ಕಾರ ರಚನೆಮಾಡುವುದಿಲ್ಲ ಎಂದು ಒಗಟಾಗಿ ಸಿದ್ದರಾಮಯ್ಯ ಹೇಳಿದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಕಡಿಮೆ ಮತಗಳು ಬಂದಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರ ನಡೆಸುವ ಶಕ್ತಿ ಪಡೆದಿಲ್ಲ. ದೇಶದಲ್ಲಿ ಜನರಿಗೆ ಮೋದಿ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನಲಾಗಿತ್ತು. ಆದರೆ ಎಲ್ಲಾ ಸಮೀಕ್ಷೆಗಳು ಸುಳ್ಳಾಗಿವೆ. ಹರಿಯಾಣದಲ್ಲಿ ಕಾಂಗ್ರೆಸ್ 30 ಕ್ಷೇತ್ರಗಳಿಗೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಹರಿಯಾಣ ಹಾಗೂ ಮಹಾರಾಷ್ಟ್ರದಲ್ಲಿ ಪಕ್ಷಕ್ಕೆ ಸಂಪನ್ಮೂಲದ ಕೊರತೆ ಇತ್ತು. ಪ್ರತಿಪಕ್ಷದ ನಾಯಕರೇ ಬಿಜೆಪಿ ಸೇರಿದ್ದರು. ಸ್ವತಂತ್ರವಾಗಿ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವ ಕನಸುಕಂಡಿದ್ದರು. ಶಿವಸೇನೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳದೇ ಹೋದರೆ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೇರಲು ಸಾಧ್ಯವಿಲ್ಲ ಎಂದರು.

ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಈ ಐದು ವರ್ಷಗಳಲ್ಲಿ ಮಾಡಿದ ಸಾಧನೆ ಏನು ಎಂದು ಹೇಳಲೇ ಇಲ್ಲ. ಪಾಕಿಸ್ತಾನ,ಕಾಶ್ಮೀರ,ಪುಲ್ವಾಮ ಈ ವಿಷಯಗಳನ್ನು ಪ್ರಸ್ತಾಪಿಸಿಯೇ ಚುನಾವಣಾ ಪ್ರಚಾರ ಮಾಡಿದ್ದಾರೆ. ಬಿಜೆಪಿಗರ ಸುಳ್ಳು ಮಾತಿಗೆ ಜನರು ಮರಳಾಗಿಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮತದಾನ ಪ್ರಮಾಣ ಕುಂಠಿತವಾಗಿದೆ. ಕಾಂಗ್ರೆಸ್ ಕಳೆದ ಬಾರಿಗಿಂತ ಈ ಬಾರಿ ಬಲ ತನ್ನ ಹೆಚ್ಚಿಸಿಕೊಂಡಿದೆ. ಪಕ್ಷಕ್ಕೆ ಸಂಪನ್ಮೂಲ ಇದ್ದಿದ್ದರೆ, ಪಕ್ಷ ತೊರೆಯುವವರ ಸಂಖ್ಯೆ ಕಡಿಮೆಯಾಗಿದ್ದರೆ ಇನ್ನೂ ಹೆಚ್ಚಿನ ಸ್ಥಾನ ಗೆಲ್ಲಬಹುದಿತ್ತು. ತಾವು ಮಹಾರಾಷ್ಟ್ರ, ಹರಿಯಾಣ ಹಾಗೂ ಕೇರಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಎರಡು ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಿದೆ. ಗೆಲುವಿಗೆ ತಾವೇ ಕಾರಣ ಎಂದು ಹೇಳುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ : ಹೆಚ್.ಡಿ.ಕುಮಾರಸ್ವಾಮಿ​

ಈ ಮುನ್ನ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹರಿಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮೇಲೆ ಪರಿಣಾಮಬೀರಲಿದೆ ಎಂದಿದ್ದಾರೆ. 

"ಉಪಚುನಾವಣೆ ಬಿಜೆಪಿಯ ಪಾಲಿಗೆ ಅಷ್ಟು ಸುಲಭವಾಗಿಲ್ಲ. ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಬಾಕಿಯಿದ್ದು, ಯಾವ ರೀತಿಯಲ್ಲಿಯಾದರೂ ತೀರ್ಪು ಹೊರಬಹುದು ಎಂದು ಪರೋಕ್ಷವಾಗಿ ಉಪಚುನಾವಣೆ ನಡೆಯುವ ಸಾಧ್ಯತೆಯಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸರ್ಕಾರ ರಚನೆ ಮಾಡುವ ಶಕ್ತಿಯನ್ನು ಮತದಾರರು ನೀಡಿದ್ದಾರೆ. ಆದರೂ ಸಹ ನಿರಂತರವಾಗಿ ಮತದಾರರನ್ನು ದಾರಿತಪ್ಪಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಆಳುವ ಬಿಜೆಪಿ ಪಕ್ಷಕ್ಕೆ ಮತದಾರರು ನೀಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಮುಂದೆ ಆ ರಾಜ್ಯದಲ್ಲಿ ಏನಾಗಲಿದೆ ಎಂದು ಯಾರಿಗೂ ಗೊತ್ತಿಲ್ಲ .ಹರಿಯಾಣದಲ್ಲಿ ಬಿಜೆಪಿ ದುರ್ಬಲವಾಗಿದೆ ಎಂದರು

ಜನರನ್ನು ಬಿಜೆಪಿ ಪದೇಪದೇ ಮರುಳು ಮಾಡಲು ಸಾಧ್ಯವಿಲ್ಲ ಎಂ.ಬಿ.ಪಾಟೀಲ್

ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಅಸ್ಥಿರಗೊಳಿಸುವ ಪ್ರಯತ್ವನ್ನು ಬಿಜೆಪಿ ನಡೆಸಿತ್ತು. ಜನರನ್ನು ಒಂದು ಬಾರಿ ಮಾತ್ರ ಮರುಳು ಮಾಡಬಹುದೇ ವಿನಃ ಪದೇಪದೇ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಮಹಾರಾಷ್ಟ್ರ,ಹರಿಯಾಣದಲ್ಲಿ ಬಿಜೆಪಿಯಿಂದ ಅಧಿಕಾರ ದುರುಪಯೋಗ : ಈಶ್ವರ್ ಖಂಡ್ರೆ

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡು ವಿಧಾನಸಭಾ ಚುನಾವಣೆ ಎದುರಿಸಿದ ಬಿಜೆಪಿಗೆ ಅಲ್ಲಿನ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com