ಉಪ ಚುನಾವಣೆಯಲ್ಲಿ ಮೈತ್ರಿ ಇಲ್ಲ: ಕಾಂಗ್ರೆಸ್, ಬಿಜೆಪಿ ನಂಬಿಕೆಗೆ ಅರ್ಹರಲ್ಲ- ಹೆಚ್. ಡಿ. ದೇವೇಗೌಡ
ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ನಿಗದಿಯಾಗಿರುವ ಉಪ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ನಂಬಿಕೆಗೆ ಅರ್ಹರಲ್ಲ ಎಂದು ಎಂದಿರುವ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.
Published: 29th October 2019 06:53 PM | Last Updated: 29th October 2019 06:53 PM | A+A A-

ಹೆಚ್. ಡಿ. ದೇವೇಗೌಡ
ನವದೆಹಲಿ: ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ನಿಗದಿಯಾಗಿರುವ ಉಪ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ನಂಬಿಕೆಗೆ ಅರ್ಹರಲ್ಲ ಎಂದು ಎಂದಿರುವ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲಾಗುವುದು ಎಂದು ಪಿಟಿಐ ಸುದ್ದಿಸಂಸ್ಥೆಗೆ ಇಂದು ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ - ಜೆಡಿಎಸ್ ಸರ್ಕಾರ ರಚನೆ ಕೋರಿ ಕಾಂಗ್ರೆಸ್ ನನ್ನ ಬಳಿ ಬಂದಿದ್ದರಿಂದ ಇಷ್ಟವಿಲ್ಲದಿದ್ದರೂ ಮೈತ್ರಿ ಸರ್ಕಾರ ರಚನೆಗೆ ಒಪ್ಪಿಕೊಂಡಿದ್ದಾಗಿ ದೇವೇಗೌಡರು ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಕಾರ್ಯತಂತ್ರ ಕುರಿತಂತೆ ಪ್ರತ್ರಿಕಿಯಿಸಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿಯೊಂದಿಗೆ ಏನನ್ನೂ ಮಾಡುವುದಿಲ್ಲ. ಇಬ್ಬರೂ ನಂಬಿಕೆಗೆ ಯೋಗ್ಯರಲ್ಲ, ಅವರಿಗೆ ಬೇಕಾದಾಗ ಮಾತ್ರ ನಮ್ಮನ್ನು ಬಳಸಿಕೊಳ್ಳುತ್ತಾರೆ. ನಂತರ ಹಾಳು ಮಾಡುತ್ತಾರೆ. ಎರಡು ರಾಷ್ಟ್ರೀಯ ಪಕ್ಷಗಳು ಒಂದೇ ಗುಣ ಹೊಂದಿವೆ ಎಂದು ಟೀಕಿಸಿದರು. ಬಿಜೆಪಿ ಕಡೆ ಮೃಧು ಧೋರಣೆ ಕುರಿತಂತೆ ಪ್ರತಿಕ್ರಿಯಿಸಿದ ದೇವೇಗೌಡರು, ಆ ರೀತಿ ಏನೂ ಇಲ್ಲ ಎಂದರು.
ಅನರ್ಹಗೊಂಡಿರುವ 17 ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ. 2018ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಮಸ್ಕಿಯ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿಲ್ಲ.