ಪ್ರತಿಪಕ್ಷ ನಾಯಕ, ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ: ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರೆದಿರುವ ಚರ್ಚೆಯಲ್ಲಿ ರಾಷ್ಟ್ರೀಯ ವಿಚಾರಗಳೇ ಪ್ರಮುಖವಾಗಿದ್ದು, ಪ್ರತಿಪಕ್ಷ ನಾಯಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ ಕುರಿತಂತೆ ಚರ್ಚೆ ನಡೆಸಲು ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ಕಾಲಾವಕಾಶಕ್ಕಾಗಿ ಕಾದು ಕುಳಿತಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರೆದಿರುವ ಚರ್ಚೆಯಲ್ಲಿ ರಾಷ್ಟ್ರೀಯ ವಿಚಾರಗಳೇ ಪ್ರಮುಖವಾಗಿದ್ದು, ಪ್ರತಿಪಕ್ಷ ನಾಯಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ ಕುರಿತಂತೆ ಚರ್ಚೆ ನಡೆಸಲು ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ಕಾಲಾವಕಾಶಕ್ಕಾಗಿ ಕಾದು ಕುಳಿತಿದ್ದಾರೆ. 

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಯಾವ ರೀತಿ ಆಚರಿಸಬೇಕು ಎಂದು ಚರ್ಚಿಸಲು ಸರ್ವ ರಾಜ್ಯಗಳ ಕಾಂಗ್ರೆಸ್'ನ ಮುಂಚೂಣಿ ನಾಯಕರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಆನಂತರ ಹೈಕಮಾಂಡ್'ನ ಪ್ರಮುಖ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸಿದರು. 

ಅಲ್ಲದೆ, ಪ್ರತಿಪಕ್ಷ ನಾಯಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ ಬಗ್ಗೆ ಚರ್ಚೆ ನಡೆಸಲು ಇಬ್ಬರೂ ನಾಯಕರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರ ಭೇಟಿಗೆ ಸಮಯಾವಕಾಶ ಕೋರಿದ್ದು, ಬಹುತೇಕ ಶುಕ್ರವಾರ ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ನೇಮಕಾತಿ ಬಗ್ಗೆ ರಾಜ್ಯದ ನಾಯಕರು ಈಗಾಗಲೇ ಪಟ್ಟಿಯನ್ನು ಸಿದ್ಧಪಡಿಸಿದ್ದು, ಸೋನಿಯಾ ಗಾಂಧಿಯವರ ಮುಂದೆ ಈ ಪಟ್ಟಿಯನ್ನು ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಮೂಲಗಳು, ಅಂತಹ ಯಾವುದೇ ಪಟ್ಟಿಗಳೂ ಸಿದ್ಧಗೊಂಡಿಲ್ಲ. ಪಕ್ಷದ ಹೈಕಮಾಂಡ್ ಯಾವ ರೀತಿಯ ಮಾರ್ಗದರ್ಶನ ನೀಡುತ್ತದೆಯೋ ಅದನ್ನು ಅನುಸರಿಸಲಾಗುತ್ತದೆ ಎಂದು ತಿಳಿಸಿದೆ. 

ಈ ನಡುವೆ ಗುರುವಾರ ಸಂಜೆ ಸೋನಿಯಾ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಮತ್ತು ಎಐಸಿಸಿಯ ಸಂಘಟನಾ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ವೇಣುಗೋಪಾಲ್ ಅವರನ್ನು ಸಿದ್ದರಾಮಯ್ಯ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಶೀಘ್ರವೇ ಪ್ರತಿಪಕ್ಷ ನಾಯಕನ ಸ್ಥಾನ ಘೋಷಿಸುವಂತೆ ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com