ಪಕ್ಷದ ಹಿರಿಯರ ಜೊತೆ ಸಿದ್ದರಾಮಯ್ಯ ಚರ್ಚೆ: ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸಲು ತಂತ್ರಗಾರಿಕೆ

ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಜಾರಿಗೊಳಿಸಲು ಬರುವುದಿಲ್ಲ. ಇದನ್ನು ಜಾರಿ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರಲಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕಾದ ವಿಚಾರಗಳ ಬಗ್ಗೆ, ವೈಫಲ್ಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಮತ್ತು ವಿಧಾನ ಪರಿಷತ್ ಸಭಾಪತಿ ಬದಲಾವಣೆಯಾಗದಂತೆ ನೋಡಿಕೊಳ್ಳಲು ತಂತ್ರಗಾರಿಕೆ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಇಂದು ಪಕ್ಷದ ಹಿರಿಯರ ಸಭೆ ನಡೆಸಿದರು.

ಸಭೆ ಬಳಿಕ ಸಿದ್ದರಾಮಯ್ಯ ಮಾತನಾಡಿ, ನಾಳೆಯಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವುದರಿಂದ ಪಕ್ಷದ ಹಿರಿಯ ನಾಯಕರ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಈ ಮಧ್ಯೆ ಬಿಜೆಪಿಯವರು ಹೊಸ ಸಮಸ್ಯೆಗಳನ್ನು ಹುಟ್ಟು ಹಾಕಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಮೂರು ಸಲ ಪ್ರವಾಹ ಬಂದಿದೆ. ಇದುವರೆಗೂ ಪರಿಹಾರ ವಿತರಣೆಯಾಗಿಲ್ಲ. ಕಳೆದ ವರ್ಷದ ಪರಹಾರವನ್ನೂ ಪೂರ್ಣವಾಗಿ ನೀಡಿಲ್ಲ.  ಅನೇಕ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಿಲ್ಲ. ವಿದ್ಯುತ್ ಬೆಲೆ ಹೆಚ್ಚಳ ಮಾಡಿದ್ದಾರೆ. ಅಗತ್ಯ ಇಲ್ಲದಿದ್ದರೂ ವಿದ್ಯುತ್ ಖರೀದಿ ಮಾಡುತ್ತಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಮನೆಗಳನ್ನು ನೀಡಿಲ್ಲ. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತರಲು ಮುಂದಾಗಿದ್ದಾರೆ, ಇದರ ಬಗ್ಗೆ ಸದನದಲ್ಲಿ ಚರ್ಚಿಸುತ್ತೇವೆ ಎಂದರು.

ಗೋಹತ್ಯೆ ನಿಷೇಧ, ಲವ್ ಜಿಹಾದ್ ಬಗ್ಗೆ ಕಾನೂನು ತರಲು ಸರ್ಕಾರ ಮುಂದಾಗಿದ್ದು, ಇವುಗಳ ಬಗೆ ನಮ್ಮ ನಿಲುವು ಏನಿರಬೆಕು ಎನ್ನುವುದನ್ನು ಸಭೆಯಲ್ಲಿ ಚರ್ಚಿಸಿದ್ದೇವೆ. ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಜಾರಿಗೊಳಿಸಲು ಬರುವುದಿಲ್ಲ. ಇದನ್ನು ಜಾರಿ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಈಗ ಕಾಯ್ದೆ ಜಾರಿಗೆ ತರಬಾರದು. ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com