

ಬೆಂಗಳೂರು: ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.
ರಾಜ್ಯದಲ್ಲಿ ಇನ್ನೊಂದು ವಾರ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಇದಾದ ಬಳಿಕ ಮಸ್ಕಿ ಹಾಗೂ ಬಸವಕಲ್ಯಾಣ ಉಪಚುನಾವಣೆ ಕೂಡ ಹತ್ತಿರ ಬರುತ್ತಿದೆ. ಉಪಚುನಾವಣೆಗಳಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಈ ಎಲ್ಲಾ ಕಾರಣಗಳಿಂದ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಅಸಮಾಧಾನಕ್ಕೆ ಎಡೆಮಾಡಿಕೊಡಲಿದೆ ಎಂದು ಬಿಜೆಪಿ ಉನ್ನತ ಮೂಲಗಳು ಮಾಹಿತಿ ನೀಡಿವೆ. ಬಿಜೆಪಿ ನಾಯಕತ್ವ ಕೂಡ ಅಸಮಾಧಾನಗೊಳ್ಳುವ ನಾಯಕರನ್ನು ಸಮಾಧಾನಪಡಿಸುವ ಪರಿಸ್ಥಿತಿಯಲ್ಲಿಲ್ಲ ಎನ್ನಲಾಗುತ್ತಿದ್ದು, ಈ ನಡುವೆ ರಾಜ್ಯ ಬಿಜೆಪಿ ನಾಯಕತ್ವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆಗಾಗಿ ಕಾದು ಕುಳಿತಿದೆ ಎಂದು ತಿಳಿದುಬಂದಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದ ಗುಂಪಿನಲ್ಲಿ ಭಾಗವಾಗಿದ್ದ ಶಾಸಕ ಎಂಟಿಬಿ ನಾಗರಾಜ್, ಆರ್ ಶಂಕರ್ ಮತ್ತು ಎನ್ ಮುನಿರತ್ನ ಅವರು ಸಚಿವ ಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ.
ಎಂಎಲ್'ಸಿ ಎ.ಹೆಚ್.ವಿಶ್ವನಾಥ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿಯವರು ತಮ್ಮ ಗುಂಪಿನಲ್ಲಿರುವ ನಾಯಕರಿಗೆ ಸಚಿವ ಸ್ಥಾನ ಕೊಡಿಸಲು ಭಾರೀ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.