
ಬೆಂಗಳೂರು:102 ವರ್ಷದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಕೆಪಿಸಿಸಿ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಯಾತ್ನಾಳ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ದೊರೆಸ್ವಾಮಿ ಅವರನ್ನು ನಿಂಧಿಸಿರುವ ಯಾತ್ನಾಳ್ ದೇಶ ವಿರೋಧಿ ಎಂದು ಆರೋಪಿಸಿದರು.
ದೇಶದ ಹಿತಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ವೃದ್ದಾಪ್ಯದಲ್ಲೂ ಅನೇಕ ಚಳವಳಿಗಳಲ್ಲಿ ದೊರೆಸ್ವಾಮಿ ತೊಡಗಿಸಿಕೊಂಡಿದ್ದಾರೆ.ಇಂತಹ ದೊಡ್ಡ ವ್ಯಕ್ತಿಯ ವಿರುದ್ಧ ಮಾತನಾಡಲು ಯತ್ನಾಳ್ ಯಾವುದೇ ಹಕ್ಕು ಹೊಂದಿಲ್ಲ. ಯತ್ನಾಳ್ ಹೇಳಿಕೆಯನ್ನು ಪ್ರತಿಯೊಬ್ಬರು ಖಂಡಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನೀಡಬೇಕಾದದ್ದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ. ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದವರಿಗೆ ಅಪಮಾನ ಮಾಡುವುದು ದೇಶ ವಿರೋಧಿಯಾಗಿದೆ. ಯಾತ್ನಾಳ್ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಜಯಮಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈ ಮಧ್ಯೆ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾಜಿ ಸಚಿವ ಹೆಚ್. ಸಿ. ಮಹಾದೇವಪ್ಪ ನೇತೃತ್ವದಲ್ಲಿ ಮೈಸೂರಿನಲ್ಲೂ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.
Advertisement