ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಎಸ್ ವೈ- ಬಿ ಎಲ್ ಸಂತೋಷ್ ಭೇಟಿ, ಸಂಪುಟ ವಿಸ್ತರಣೆ ಕುರಿತು ಚರ್ಚೆ

ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ವಿಷಯ ಗರಿಗೆದರಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನಿನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ವಿಷಯ ಗರಿಗೆದರಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನಿನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ನಿನ್ನೆ ಅಪರಾಹ್ನ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಬಿ ಎಲ್ ಸಂತೋಷ್, ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಳಗೆ ಯಾರನ್ನೂ ಬಿಟ್ಟಿರಲಿಲ್ಲ. ಸಂಪುಟ ವಿಸ್ತರಣೆ, ಹೊಸ ಶಾಸಕರ ನೇಮಕ ಮತ್ತು ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಕುರಿತು, ಮುಂಬರುವ ಉಪ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರ ಮತ್ತು ಮಸೂದೆಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಂಬಂಧ ಮಾತುಕತೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಬಂದಿದ್ದ ಸಿಎಂ ಅವರಿಗೆ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಕ್ಕಿರಲಿಲ್ಲ. ಈಗ ಬಿಜೆಪಿಯಲ್ಲಿ ಶಾಸಕರ ಸಂಖ್ಯೆ ಹೆಚ್ಚಾಗಿದ್ದು, ಖಾಲಿ ಇರುವ ಸಚಿವ ಸಂಪುಟ ವಿಸ್ತರಣೆಗೆ ಶಾಸಕರಿಂದ ಲಾಬಿ ತೀವ್ರ ಮಟ್ಟದಲ್ಲಿ ನಡೆಯುತ್ತಿದೆ. ನಿನ್ನೆ ಬಿ ಎಲ್ ಸಂತೋಷ್ ಅವರು ಸಿಎಂ ಅವರನ್ನು ಭೇಟಿ ಮಾಡುವ ಮುನ್ನ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಗ್ರಾಮ ಪಂಚಾಯತ್ ಎಲೆಕ್ಷನ್ ಸಂಬಂಧ ಚರ್ಚಿಸಿದ್ದರು. ಈ ತಿಂಗಳಾಂತ್ಯದಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.

ನಮ್ಮ ಪಕ್ಷದಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದವರಿಗೆ ಹೆಚ್ಚಿನ ದೊಡ್ಡ ಜವಾಬ್ದಾರಿ ನೀಡಿದ್ದರೂ ಕೂಡ ಸರ್ಕಾರದ ರಾಜಕೀಯ ವ್ಯವಹಾರಗಳಲ್ಲಿ, ಆಡಳಿತದಲ್ಲಿ ಭಾಗವಹಿಸಬಾರದೆಂದು ಸೂಚನೆಯಿದ್ದರೂ ಕೂಡ ಬಿ ಎಲ್ ಸಂತೋಷ್ ಅವರು ಸಭೆಯಲ್ಲಿ ಭಾಗವಹಿಸಿದ್ದು ಅಚ್ಚರಿ ತಂದಿದೆ. ಆದರೆ ತಮಗೆ ರಾಜ್ಯ ರಾಜಕೀಯದಲ್ಲಿ ಹೆಚ್ಚಿನ ಪ್ರಭಾವವಿದೆ, ಪಂಚಾಯತ್ ಚುನಾವಣೆಗಳಲ್ಲಿ ಕೂಡ ತಮ್ಮ ಮಾತು ನಡೆಯುತ್ತದೆ ಎಂಬುದನ್ನು ಬಿ ಎಲ್ ಸಂತೋಷ್ ಅವರು ತೋರಿಸಿಕೊಟ್ಟಿರುವುದು ನಿನ್ನೆಯ ಸಭೆಯಿಂದ ತಿಳಿದುಬಂದಿದೆ.

ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೇಕಡಾ 80ರಷ್ಟು ಸ್ಥಾನಗಳನ್ನು ಗೆಲ್ಲಲು ಪಕ್ಷ ಗುರಿಯಾಗಿಸಿಕೊಂಡಿದೆ. ನಾವು ಪಂಚರತ್ನ ಮತ್ತು ಪಂಚಸೂತ್ರ ತಂತ್ರಗಳನ್ನು ಅಳವಡಿಸಲು ಸಿದ್ದರಾಗಿದ್ದೇವೆ. ಐವರ ತಂಡ ರಚಿಸುತ್ತೇವೆ. ಅದರಲ್ಲಿ ಎಸ್ ಸಿ/ಎಸ್ ಟಿ ಸಮುದಾಯ ಸದಸ್ಯರು, ಮಹಿಳೆ, ಯುವಕರು ಮತ್ತು ಇತರ ಜಾತಿ ಸದಸ್ಯರು ಪ್ರತಿ ಬೂತ್ ಮಟ್ಟದಲ್ಲಿ ಇರುತ್ತಾರೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com