ದೇಶದ ತ್ರೈಮಾಸಿಕ ಜಿಡಿಪಿ ಮಹಾ ಕುಸಿತಕ್ಕೆ ಅಡ್ಡ ಕಸುಬಿ ಆರ್ಥಿಕ ನಿರ್ವಹಣೆಯೇ ಕಾರಣ: ಸಿದ್ದರಾಮಯ್ಯ

ದೇಶದ ತ್ರೈಮಾಸಿಕ ಜಿಡಿಪಿ ಮಹಾಕುಸಿತಕ್ಕೆ, ಕೇಂದ್ರ ಅಡ್ಡಕಸುಬಿ ಆರ್ಥಿಕ ನಿರ್ವಹಣೆ  ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ದೇಶದ ತ್ರೈಮಾಸಿಕ ಜಿಡಿಪಿ ಮಹಾಕುಸಿತಕ್ಕೆ, ಕೇಂದ್ರ ಅಡ್ಡಕಸುಬಿ ಆರ್ಥಿಕ ನಿರ್ವಹಣೆ  ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. 

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ, ಈ ಕುಸಿತದ ಪೂರ್ಣ ಹೊಣೆಯನ್ನು ಕೊರೋನಾ ಮೇಲೆ ಹೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನುಣುಚಿ ಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳ ಹೇಳುತ್ತಿವೆ, ಆರ್ ಬಿ ಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರು  ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಈಗ ಕುರುಡು-ಕಿವುಡು ಆಗಿದ್ದ ಸರ್ಕಾರ ಈಗ ಕೊರೋನಾಕ್ಕಾಗಿ ರೋದಿಸುತ್ತಿದೆ ಎಂದು ತಿಳಿಸಿದ್ದಾರೆ.

2015ರಲ್ಲಿ ಜಿಡಿಪಿ ಅಂದಾಜು ಮಾಡಿದ ಮೂಲ ವರ್ಷವನ್ನು 2004-05 ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನು ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೋನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳುವುದು ಕೊರೋನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಲಾಕ್ ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಅದನ್ನು ಬೆಂಬಲಿಸಿತ್ತು. ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮವಾಗಿ ಅದರಿಂದ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನ ಮಂತ್ರಿಯವರೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್ ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ ಎಂದು ಅವರು ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು. ರೋಗದ ಕಾರಣ ತಿಳಿಯದೆ ಔಷಧಿ ಕೊಟ್ಟರೆ ರೋಗ ಗುಣವಾಗಲಾರದು ಎಂದು ಪ್ರಕಟಣೆಲ್ಲಿ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com