ಮೋದಿ ವೈಫಲ್ಯ ಮುಚ್ಚಲು ರಾಜ್ಯದ ಬಲಿ ನೀಡುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಹಿತವನ್ನು ಬಲಿಕೊಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಹಿತವನ್ನು ಬಲಿಕೊಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಬೀದಿಗಿಳಿದು ರಾಜ್ಯ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಎಳೆಎಳೆಯಾಗಿ ಬಿಚ್ಚಿಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. 

ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು  ಆರೋಪಿಸಿ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ ಎಂದು ಅವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2020-21ರ ಅಂತ್ಯಕ್ಕೆ  ರೂ.3,68,692 ಕೋಟಿ ಸಾಲದ ಅಂದಾಜನ್ನು ಬಜೆಟ್‌ನಲ್ಲಿ ಮಾಡಿದ್ದರು. ಈಗ ಕೊರೊನಾದಿಂದ ತೆರಿಗೆ ಸಂಗ್ರಹ  ಕುಸಿದಿದೆ, ವಿತ್ತೀಯ ಕೊರತೆ  ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ?

ಹೊಸ ಸಾಲದ ಹೊರೆ ರೂ.11,324 ಕೋಟಿಗಷ್ಟೇ ಸೀಮಿತವೇ? ಇದು ಒಟ್ಟು ಜಿಎಸ್ ಟಿ ಪರಿಹಾರ 97,000 ಕೋಟಿಯಲ್ಲಿ ರಾಜ್ಯದ ಪಾಲು ಅಷ್ಟೆ. ಇದರ ಜೊತೆ ಕೊರೊನಾದಿಂದಾಗಿ ಜಿಎಸ್ ಟಿ ಒಟ್ಟು ನಷ್ಟ ರೂ.2,35,000 ಕೋಟಿ ಎಂದು ಅಂದಾಜು ಮಾಡಲಾಗಿದೆ. ಇದನ್ನು ಕೇಂದ್ರ ತುಂಬಿಕೊಡಲಿದೆಯೇ? ರಾಜ್ಯವೇ ಸಾಲ‌ಮಾಡಬೇಕೇ? ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಕುಟುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com