ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮಕೈಗೊಳ್ಳಲಿ: ಆರ್.ವಿ.ದೇಶಪಾಂಡೆ

ಮಹಾತ್ಮ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಆಗ್ರಹಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಹಾತ್ಮ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಆಗ್ರಹಿಸಿದ್ದಾರೆ.

ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾದ ಮಾತ್ರಕ್ಕೆ ಅನಂತ್ ಕುಮಾರ್ ಹೆಗಡೆ ರಾಷ್ಟ್ರಪಿತ ಮಹಾತ್ಮಾಗಾಂಧೀಜಿಗೆ ಅವಮಾನ ಮಾಡಲು ಸಂವಿಧಾನದಲ್ಲಿ ಅವರಿಗೆ ಯಾವುದೇ ಹಕ್ಕಿಲ್ಲ. ಇಂತಹ ಬೇಜವಾಬ್ದಾರಿ ಸಂಸದರ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಂತೆಯೇ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಜಿಸಿದವರು ಗಾಂಧೀಜಿ. ಇಂತಹವರ ಬಗ್ಗೆ ಅಪಮಾನಕಾರಿ ಹೇಳಿಕೆಗಳನ್ನು ಯಾರೂ ಕೊಡಬಾರದು. ಆದರೆ ಅನಂತ್ ಕುಮಾರ್ ಹೆಗಡೆ ತಮ್ಮ ಹುದ್ದೆಯ ಗೌರವವನ್ನು ಮರೆತು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ‌. ಇವರ ವಿರುದ್ಧ ಬಿಜೆಪಿ ವರಿಷ್ಠರು ಕ್ರಮತೆಗೆದುಕೊಳ್ಳಬೇಕು. ಲೋಕಸಭಾ ಸ್ಪೀಕರ್ ಮೊದಲು ಕ್ರಮತೆಗೆದುಕೊಳ್ಳಬೇಕು. ಸ್ಪೀಕರ್ ಅವರಿಗೆ ಆ ಅಧಿಕಾರವಿದೆ ಎಂದರು. ಅಲ್ಲದೆ ಹೆಗಡೆ ಹೇಳಿಕೆಯನ್ನು ಖಂಡಿಸಿದ ಆರ್.ವಿ.ದೇಶಪಾಂಡೆ, ಸ್ವಾತಂತ್ರ್ಯ ತಂದುಕೊಟ್ಟವರನ್ನು ಬಿಜೆಪಿಗರು ಅವಮಾನಿಸಿದ್ದಾರೆ.

ಉತ್ತರಕನ್ನಡದ ಅಂಕೋಲಾ, ಶಿರಸಿ, ಸಿದ್ದಾಪುರ ಜನ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು‌. ಗಾಂಧೀಜಿ ಬಗ್ಗೆ ಅವರ ಸ್ವಾತಂತ್ರ್ಯ ಹೋರಾಟಕ್ಕೆ ಅವಮಾನವೆಸಗಿರುವುದು ಉತ್ತರ ಕನ್ನಡ ಕ್ಷೇತ್ರದ ಜನರ ಸ್ವಾತಂತ್ರ್ಯ ಹೋರಾಟಕ್ಕೂ ಅಪಮಾನ ಮಾಡಿದಂತೆ. ಇದು ಸಂವಿಧಾನಕ್ಕೂ ಮಾಡಿದ ಅಪಚಾರ ಎಂದು ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು‌.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com