ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕ: ಸಿಎಲ್ ಪಿ, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಕೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

Published: 11th March 2020 03:24 PM  |   Last Updated: 11th March 2020 04:59 PM   |  A+A-


DK Shivakumarx

ಡಿ.ಕೆ ಶಿವಕುಮಾರ್

Online Desk

ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಚುಕ್ಕಾಣಿ ನೀಡಿದೆ. 

ಈ ಮೂಲಕ ಲಿಂಗಾಯತ ಸಮುದಾಯದ ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ಬಣದ ಎಂ.ಬಿ.ಪಾಟೀಲ್ ಆಸೆಗೆ ತಣ್ಣೀರು ಎರಚಿದಂತಾಗಿದೆ.

ಅಲ್ಲದೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಹಂಚಿಕೆಯಾಗಿದ್ದು, ಪ್ರಸಕ್ತ ಇರುವ ಈಶ್ವರ್ ಖಂಡ್ರೆ ಜೊತೆಗೆ ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹಮದ್ ಅವರೂ ಸಹ ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ (ಲಿಂಗಾಯತ), ಸತೀಶ್ ಜಾರಕಿಹೊಳಿ (ವಾಲ್ಮೀಕಿ ಸಮುದಾಯ), ಸಲೀಂ ಅಹಮದ್ (ಅಲ್ಪಸಂಖ್ಯಾತ) ಅವರನ್ನು ನೇಮಿಸಲಾಗಿದೆ. ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಆದ್ಯತೆ ನೀಡುವ ತಂತ್ರಗಾರಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರದರ್ಶಿಸಿದೆ. 

15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ದಿನೇಶ್ ಗುಂಡೂರಾವ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಿವಕುಮಾರ್ ನೇಮಕಗೊಳಿಸಿರುವ ಹೈಕಮಾಂಡ್, ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಿದ್ದು, ಅವರ ಸೇವೆಗೆ ಧನ್ಯವಾದ ಸಲ್ಲಿಸಿದೆ. ಇನ್ನು ಸಿದ್ದರಾಮಯ್ಯ ಅವರು ಈ ಹಿಂದಿನಂತೆ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ. ವಿಧಾನ ಪರಿಷತ್‌ಗೆ ನಾರಾಯಣಸ್ವಾಮಿ ಮತ್ತು ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.

 

 

ಮಧುಸೂದನ್ ಮಿಸ್ತ್ರಿ ನೇತೃತ್ವದ ಹೈಕಮಾಂಡ್ ನಾಯಕರ ನಿಯೋಗ ರಾಜ್ಯಕ್ಕೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ವಿವಿಧ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿತ್ತು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕದೊಂದಿಗೆ ಹಲವು ತಿಂಗಳುಗಳಿಂದ ಉಂಟಾಗಿದ್ದ ನಾಯಕತ್ವ ಬಿಕ್ಕಟ್ಟು ಶಮನಗೊಂಡಂತಾಗಿದೆ.

ಶಿವಕುಮಾರ್ ರಾಜಕೀಯ ಜೀವನ:

ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83). ನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಡಿ.ಕೆ. ಶಿವಕುಮಾರ್, ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‍ ಅಧ್ಯಕ್ಷರಾಗಿ ಕನಕಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ವ್ಯವಸ್ಥೆಗೊಳಿಸಿ ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡರು. 1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾದ ಎಚ್.ಡಿ. ದೇವೇಗೌಡ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ. ಶಿವಕುಮಾರ್ ಮೇಲೆ ಬಿತ್ತು. ಹೀಗಾಗಿ ರಾಜಕಾರಣದ ಪರಿಚಯವೇ ಇಲ್ಲದಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಹೆಚ್.ಡಿ. ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಲಾಯಿತು. ಸಾಕಷ್ಟು ಪ್ರಬಲ ಪ್ರತಿರೋಧವನ್ನೇ ತೋರಿದ ಡಿ.ಕೆ. ಶಿವಕುಮಾರ್ ಚುನಾವಣೆಯಲ್ಲಿ ಎಚ್.ಡಿ. ದೇವೇಗೌಡರು ಅತ್ಯಂತ ಪ್ರಯಾಸದ ಜಯ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು. ವಿಧಾನ ಸಭಾ ಚುನಾವಣೆಯಾದ ಕೆಲವೇ ದಿನಗಳಲ್ಲಿ 1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು. 1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು. 1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಸೋರೆಕೊಪ್ಪ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾಗುವಂತೆ ಮಾಡುವಲ್ಲಿ ಡಿ.ಕೆ. ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೆ ಬಹುಮಾನದ ದ್ಯೋತಕವಾಗಿ ಬಂಗಾರಪ್ಪನವರು ಈ ಯುವಕನನ್ನು ರಾಜ್ಯಮಟ್ಟದ ಸಚಿವರನ್ನಾಗಿ ಮಾಡಿ ಬಂಧಿಖಾನೆ ಖಾತೆ ನೀಡಿದರು. ಆದರೂ ಕಾಂಗ್ರೆಸ್ ಪಕ್ಷದಲ್ಲಿದ್ದ ಹಲವು ವಿರೋಧಿಗಳ ರಾಜಕೀಯ ಪಿತೂರಿಯಿಂದಾಗಿ 1994ರಲ್ಲಿ ಪಕ್ಷದ ಟಿಕೆಟ್ ವಿರೋಧಿಸಲಾಯಿತು, ಧೃತಿಗೆಡದೆ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು. 2004ರಲ್ಲಿ ಡಿ.ಕೆ. ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಬಾರಿ ಆರಿಸಿ ಬಂದರೂ ಕೂಡ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಲು ಅಗತ್ಯವಾದ ಬಹುಮತವಿಲ್ಲದ ಕಾರಣ ಕೋಮುವಾದಿ ಬಿ.ಜೆ.ಪಿ. ಪಕ್ಷ ಅಧಿಕಾರಕ್ಕೇರದಂತೆ ತಡೆಯಲು ದೇವೇಗೌಡ ನೇತೃತ್ವದ ಪಕ್ಷವಾದ ಜೆ.ಡಿ.ಎಸ್.(ಜಾತ್ಯತೀತ) ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಯಿತು. ಹೀಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಉದಯಿಸಿದ ಕಾಂಗ್ರೆಸ್-ಜೆ.ಡಿ.ಎಸ್.(ಜಾ), ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಾನವಿರಲಿಲ್ಲ, ಅವರು ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಬಾರದೆಂಬುದು ಹೆಚ್.ಡಿ. ದೇವೇಗೌಡರು ಷರತ್ತು ವಿಧಿಸಿದ್ದರು. ಆದರೂ ಒಟ್ಟಾರೆ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ತಮಗೆ ಮಾಡಲಾದ ಅಪಮಾನವನ್ನು ಸಹಿಸಿಕೊಂಡರು ಹಾಗೂ ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವಲ್ಲಿ ತಮ್ಮ ಸಮಯವನ್ನು ಮೀಸಲಿಟ್ಟರು. ತಮ್ಮ ವಿರುದ್ಧ ದೇವೇಗೌಡರು ನಡೆಸಿದ ಸೇಡಿನ ರಾಜಕಾರಣಕ್ಕೆ ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡುವಲ್ಲಿ ಶೀಘ್ರದಲ್ಲಿಯೇ ಯಶಸ್ವಿಯಾದರು. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ರಾಜಕೀಯವಾಗಿ, ಸಾರ್ವಜನಿಕವಾಗಿ ಅಷ್ಟೇನು ಪರಿಚಿತರಲ್ಲದ ತೇಜಸ್ವಿನಿಗೌಡ ಅವರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಸೇಡು ತೀರಿಸಿಕೊಂಡರು. ಎಸ್.ಎಂ. ಕೃಷ್ಣ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಸಂಗದ ಸಂಪೂರ್ಣ ಕೀರ್ತಿ, ಗೌರವ, ಡಿ.ಕೆ. ಶಿವಕುಮಾರ್ ಅವರ ವ್ಯೂಹರಚನೆಗೆ ಸಂದ ವಿಜಯ ಎಂದೇ ಭಾವಿಸಲಾಗುತ್ತಿದೆ. 1999ರಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಗೊಂಡಾಗ ಶಿವಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಂತು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ರೀತಿಯಲ್ಲಿ ಜಯಗಳಿಸಿ ಸರ್ಕಾರ ರಚಿಸುವಲ್ಲಿ ಕಾರಣೀಭೂತರಾದರು. 

ಎಸ್.ಎಂ. ಕೃಷ್ಣ ಚುನಾವಣಾ ಪೂರ್ವದಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು ಡಿ.ಕೆ. ಶಿವಕುಮಾರ್, ಇದರಿಂದಲೇ ಕಾಂಗ್ರೆಸ್ ಪಕ್ಷ 139 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸುವಂತಾಯಿತು. 1999ರಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅನುಮತಿ ನೀಡಿತ್ತು. ಈ ಬಾರಿ ಅವರ ಎದುರಾಳಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ. ದೇವೇಗೌಡರು ರಾಜಕೀಯ ಸ್ಥಿತ್ಯಂತರದಿಂದ ಅಂದಿನ ಪ್ರಧಾನ ಮಂತ್ರಿಯಾಗಿದ್ದರು. ನಿರೀಕ್ಷಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತರು. ಡಿ.ಕೆ. ಶಿವಕುಮಾರ್ ಸತತ 3ನೇ ಬಾರಿಗೆ ಮರಳಿ ಗೆಲುವು ಸಾಧಿಸಲು ಸಾಧ್ಯವಾಯಿತು. ಎಸ್.ಎಂ. ಕೃಷ್ಣ ಅವರು ಕ್ಯಾಬಿನೆಟ್‍ ದರ್ಜೆ ಸಚಿವರನ್ನಾಗಿ ನೇಮಿಸಿ ಮಹತ್ವದ ಸಹಕಾರ ಖಾತೆ ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ತಕ್ಕ ಮನ್ನಣೆ ನೀಡಿದರು. 2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ರಾಜ್ಯ ನಗರ ಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾಗಿ ಯುವಕರನ್ನು ಸಂಘಟಿಸಿ ಜೀವನದಲ್ಲಿ ನೆಲೆಗೊಳಿಸುವ “ರಾಜೀವ್‍ಯುವ ಶಕ್ತಿ” ಸಂಘಟನೆಗಳು ರಾಜ್ಯದಲ್ಲಿ ತಲೆಎತ್ತಲು ಕಾರಣೀಭೂತ ರಾದರು. ವಿಶ್ವದಲ್ಲಿಯೇ ಮೊದಲನೆಯದು ಎನ್ನಿಸಿದ ಸ್ತ್ರೀ ಶಕ್ತಿ ಸಂಘಟನೆಗಳನ್ನು ಆರಂಭಿಸುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾಲು ಮಹತ್ವದ್ದು. 2008ರಲ್ಲಿ ಎಸ್.ಎಂ. ಕೃಷ್ಣ ರಾಜ್ಯಪಾಲ ಪದವಿ ತ್ಯಜಿಸಿ ಪುನರ್‌ ರಾಜಕಾರಣಕ್ಕೆ ಬರಬೇಕು ಎಂದು ಬಯಸಿದಾಗ ಅವರನ್ನು ಕರೆತಂದು ಮತ್ತೊಮ್ಮೆ ಕರ್ನಾಟಕದಿಂದ ರಾಜ್ಯಸಭೆಗೆ ಅವರನ್ನು ಆಯ್ಕೆಮಾಡುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿದರು. ಆನಂತರ ಎಸ್.ಎಂ. ಕೃಷ್ಣ ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ವಿದೇಶಾಂಗ ವ್ಯವಹಾರಗಳ ಮಹತ್ವದ ಖಾತೆಯನ್ನು ನಿಭಾಯಿಸಿದರು. ವೈಯಕ್ತಿಕ ಜೀವನದಲ್ಲಿ ಪ್ರಗತಿಪರ ರೈತರಾಗಿ, ವಸತಿ ಯೋಜನೆಗಳ ನಿರ್ಮಾತೃರಾಗಿರುವ ಡಿ.ಕೆ. ಶಿವಕುಮಾರ್, ನ್ಯಾಷನಲ್‍ ಎಜುಕೇಷನ್ ಫೌಂಡೇಷನ್‍ನ ಸ್ಥಾಪಕ ಅಧ್ಯಕ್ಷರಾಗಿ ಇಂಜಿನಿಯರಿಂಗ್, ನರ್ಸಿಂಗ್ ಹಾಗೂ ಮ್ಯಾನೇಜ್‍ಮೆಂಟ್ ವಿದ್ಯಾಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಲ್ಲದೆ ವಿಶ್ವಮಟ್ಟದ ಎರಡು ಪ್ರಾಥಮಿಕ ಶಾಲೆಗಳನ್ನು ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನೇತೃತ್ವದ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಕ್ಷೇತ್ರದ ಹಲವಾರು ಸಮಸ್ಯಾತ್ಮಕ ಗ್ರಾಮಗಳಲ್ಲಿ ಶುದ್ಧಕುಡಿಯುವ ನೀರು ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಕೇವಲ 10 ಪೈಸೆಗೆ ಒಂದು ಲೀಟರ್ ಶುದ್ಧ ಕುಡಿಯುವ ನೀರು ಸಿಗುವಂತೆ ಮಾಡಿದೆ. 100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಈ ಸ್ಥಾವರಗಳ ಮೂಲಕ ಶುದ್ಧ ಕುಡಿಯುವ ನೀರು ದೊರಕಿಸಿಕೊಡುವ ಮೂಲಕ ಅಶುದ್ದ ನೀರಿನ ಬಳಕೆಯಿಂದ ಜನರಿಗಾಗುತ್ತಿದ್ದ ರೋಗರುಜಿನಗಳನ್ನು ನಿವಾರಿಸುವಲ್ಲಿ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಯಶಸ್ವಿಯಾಗಿದೆ. 


Stay up to date on all the latest ರಾಜಕೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp