ಪಕ್ಷದ ಹಿರಿಯ, ಕಿರಿಯರ ನಾಯಕರನ್ನು ಭೇಟಿಮಾಡುತ್ತಿರುವ ಡಿ.ಕೆ.ಶಿವಕುಮಾರ್

ಬಹುತೇಕ ನಾಯಕರ ವಿರೋಧದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಅವರು ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದಾರೆ.
ಸಿದ್ದರಾಮಯ್ಯ - ಡಿಕೆ ಶಿವಕುಮಾರ್
ಸಿದ್ದರಾಮಯ್ಯ - ಡಿಕೆ ಶಿವಕುಮಾರ್

ಬೆಂಗಳೂರು: ಬಹುತೇಕ ನಾಯಕರ ವಿರೋಧದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಅವರು ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದಾರೆ.

ಬಹುತೇಕ ಎಲ್ಲ ನಾಯಕರನ್ನು ಭೇಟಿ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜು ಖರ್ಗೆ, ಕೆ.ಎಚ್. ಮುನಿಯಪ್ಪ ಮತ್ತಿತರ ಜತೆ ಸಮಾಲೋಚನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ದಿನವೇ ವಿಧಾನಸಭೆಯ ಮೊಗಸಾಲೆಯಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಇನ್ನೋರ್ವ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಮನೆಗಳಿಗೆ ತೆರಳಿ ಪಕ್ಷ ಮುನ್ನಡೆಸಲು ಸಹಕಾರ ನೀಡುವಂತೆ ಕೋರಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷವನ್ನು ಮುನ್ನಡೆಸುವುದು ಹಾಗೂ ಆಡಳಿತರೂಢ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ನಡೆಸಲು ನಿಮ್ಮ ಸಹಕಾರ ಅತ್ಯಗತ್ಯ ಎಂದು ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೆ ಸಿದ್ದರಾಮಯ್ಯ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಹೈಕಮಾಂಡ್ ಸಿದ್ದರಾಮಯ್ಯ ಅವರ ಬೇಡಿಕೆಗಳಿಗೂ ಸ್ಪಂದಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನೇ ಈ ಹುದ್ದೆಗೆ ಆಯ್ಕೆ ಮಾಡಿದೆ. ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಶಿವಕುಮಾರ್ ಅವರ ಮುಂದಿನ ಬೆಳವಣಿಗೆಗೆ ಸಾಕಷ್ಟು ಸಮಸ್ಯೆ ತಂದೊಡ್ಡುತ್ತದೆ ಎನ್ನುವ ಕಾರಣಕ್ಕೆ ಅವರ ವಿಶ್ವಾಸ ಗಳಿಸಿ ಹೊಂದಾಣಿಕೆಯಿಂದ ಪಕ್ಷ ಸಂಘಟಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆಯಿಂದ ಹೋಗುವಂತೆ ಹೈಕಮಾಂಡ್ ಕೂಡ ಸಲಹೆ ನೀಡಿದೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಮುಂದಿನ ಮೂರುವರೆ ವರ್ಷ ಪಕ್ಷದ ಯಾವುದೇ ನಾಯಕರ ಜೊತೆ ಆಂತರಿಕ ಸಂಘರ್ಷಕ್ಕೆ ಇಳಿಯದೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಶಿವಕುಮಾರ್ ಅಧ್ಯಕ್ಷರಾಗಲು ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸಿದಾಗ ಮೂಲ ಕಾಂಗ್ರೆಸ್ ನ ಕೆಲವು ನಾಯಕರು ತಾವೇ ಅಧ್ಯಕ್ಷ ಗಾದಿಗೇರಲು ಕಸರತ್ತು ನಡೆಸಿದ್ದರು. ಆಗ ಮಲ್ಲಿಕಾರ್ಜುನ ಖರ್ಗೆ ಡಿ.ಕೆ.ಶಿವಕುಮಾರ್ ಪರವಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಶಿವಕುಮಾರ್ ಮುಂದಿನ ದಿನಗಳಲ್ಲಿಯೂ ತಮ್ಮ ಹೋರಾಟಕ್ಕೆ ಸಿದ್ದರಾಮಯ್ಯ ಅವರ ಸಹಕಾರ ಹಾಗೂ ಆಶೀರ್ವಾದ ಅಗತ್ಯ ಎನ್ನುವ ಕಾರಣಕ್ಕೆ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಇನ್ನೋರ್ವ ಹಿರಿಯ ದಲಿತ ನಾಯಕ ಕೆ.ಎಚ್.ಮುನಿಯಪ್ಪ ಅವರನ್ನೂ ಭೇಟಿ ಮಾಡಿ, ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com