ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ಕಾಂಗ್ರೆಸ್‌ ನಿಯೋಗದಿಂದ ಆಯೋಗಕ್ಕೆ ಮನವಿ 

ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಿಗದಿತ ಅವಧಿಗೆ ನಡೆಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆಮನವಿ ಮಾಡಿದೆ. 
ಆಯೋಗಕ್ಕೆ ಕಾಂಗ್ರೆಸ್ ಮನವಿ
ಆಯೋಗಕ್ಕೆ ಕಾಂಗ್ರೆಸ್ ಮನವಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಿಗದಿತ ಅವಧಿಗೆ ನಡೆಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆಮನವಿ ಮಾಡಿದೆ. 

ಚುನಾವಣಾ ಆಯುಕ್ತರನ್ನು ಭೇಟಿಮಾಡಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ, ಗ್ರಾಮ ಪಂಚಾಯತಿಗಳ ಅಧಿಕಾರಾವಧಿಯು ಮುಕ್ತಾಯಗೊಳ್ಳುತ್ತಿದ್ದರೂ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಪ್ರಾಮಾಣಿಕವಾಗಿ ಪ್ರಕ್ರಿಯೆಯನ್ನು ಭಾರತೀಯ ಸಂವಿಧಾನ 1950 ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆ 1993 ರ ಆಶಯದಂತೆ ಆರಂಭಿಸಿಲ್ಲದಿರುವುದು ಸಂವಿಧಾನ ವಿರೋಧಿಯಾದ ನಡೆಯಾಗಿದೆ ಎಂದು ದೂರಿದರು.

ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನಡೆಯಬೇಕಾದ ಚುನಾವಣಾ ಪ್ರಕ್ರಿಯೆಗೆ ಮೇಲಿನ ಮೇಲ್ವಿಚಾರಣೆ, ಮತದಾರರ ಪಟ್ಟಿ ತಯಾರಿಸುವಿಕೆ ಮತ್ತು ನಿಯಂತ್ರಣಗಳನ್ನು ರಾಜ್ಯ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಗೆ ನೀಡಲಾಗಿದೆ. ಸಂವಿಧಾನದ 243ಇ ವಿಧಿಯಂತೆ ಗ್ರಾಮ ಪಂಚಾಯತಿಯೊಂದು ಮೊದಲ ಸಭೆ ನಡೆಸಿದ ದಿನಾಂಕದಿಂದ ಐದು ವರ್ಷಗಳ ಅವಧಿಯವರೆಗೆ ಅಧಿಕಾರ ಹೊಂದಿದೆ. 

ಅದರಂತೆ 2015 ನೇ ಇಸವಿಯಲ್ಲಿ ನಮ್ಮ ರಾಜ್ಯದ 6024 ಗ್ರಾಮ ಪಂಚಾಯತಿಗಳ ಸದಸ್ಯರ ಸ್ಥಾನಗಳಿಗಾಗಿ ಚುನಾವಣೆಯು ನಡೆದಿದೆ. ಬಹುಪಾಲು ಗ್ರಾಮ ಪಂಚಾಯತಿಗಳ ಅಧಿಕಾರಾದ ಅವಧಿಯು ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ಮುಕ್ತಾಯವಾಗುತ್ತದೆ. 

ಆದ್ದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಉದ್ದೇಶಕ್ಕೆ ವಿರುದ್ಧವಾಗಿ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳಿಗೆ ನಿಗಧಿತ ಅವಧಿಯಲ್ಲಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಗ್ರಾಮಗಳ ವಿಕೇಂದ್ರೀಕೃತ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆಯನ್ನು ದಮನ ಮಾಡಿದಂತಾಗುತ್ತದೆ. ಇದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಧ್ಯೇಯೋದ್ದೇಶಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅವರು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com