ಮಸ್ಕಿ, ಬಸವ ಕಲ್ಯಾಣ ಕ್ಷೇತ್ರ ಉಪಚುನಾವಣೆಯತ್ತ ರಾಜಕೀಯ ಪಕ್ಷಗಳ ಮುಂದಿನ ಗಮನ!

ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆ ಬಳಿಕ ಇದೀಗ ರಾಜಕೀಯ ಪಕ್ಷಗಳ ಗಮನ ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರದತ್ತ ಹೊರಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆ ಬಳಿಕ ಇದೀಗ ರಾಜಕೀಯ ಪಕ್ಷಗಳ ಗಮನ ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರದತ್ತ ಹೊರಳಿದೆ. 

ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಉಪಚುನಾವಣೆ ನಡೆಯುವುದು ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಸಿದ್ಧತೆ ನಡೆಸಲು ಮುಂದಾಗಿರುವ ಬಿಜೆಪಿ ಇದೇ ನವೆಂಬರ್ 5 ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ನಡೆಸಲಿದೆ. ಸಭೆಯಲ್ಲಿ ಉಪಚುನಾವಣೆಗೆ ರೂಪಿಸಬೇಕಿರುವ ತಂತ್ರಗಳ ಕುರಿತು ಚರ್ಚೆ ನಡೆಸಲಿದ್ದಾರೆ. 

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಸಂಪುಟ ಸಚಿವರು ಭಾಗವಹಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಹೇಳಿದ್ದಾರೆ. 

ಸಾಮಾನ್ಯವಾಗಿ ಈ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿತ್ತು. ಆದರೆ, ಇದೀಗ ಇತರೆ ಪ್ರದೇಶಗಳಲ್ಲೂ ನಡೆಸಲು ತೀರ್ಮಾನಿಸಲಾಗಿದೆ. ಈ ಬಾಗಿ ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಮುಂದಿನ ಉಪಚುನಾವಣೆಗಳತ್ತ ಪಕ್ಷ ಗಮನಹರಿಸಿದೆ. ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರ, ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಬಳಿಕ ಖಾಲಿ ಉಳಿದಿರುವ ಬೆಳಗಾವಿ ಲೋಕಸಭಾ ಸ್ಥಾನದತ್ತ ಕೂಡ ಗಮನಹರಿಸಲಾಗುತ್ತಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com