ಉಪ ಚುನಾವಣೆ ಫಲಿತಾಂಶದ ಬಳಿಕ ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ-ಯಡಿಯೂರಪ್ಪ

ತೀವ್ರ ಕುತೂಹಲದಿಂದ ಕಾಯುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲಿಯೇ ನಡೆಯಲಿದೆ. ನವೆಂಬರ್ 10 ರಂದು ವಿಧಾನಸಭಾ ಉಪ ಚುನಾವಣೆ  ಫಲಿತಾಂಶ ಪ್ರಕಟವಾದ ಬಳಿಕ ಈ ಸಂಬಂಧ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ತೀವ್ರ ಕುತೂಹಲದಿಂದ ಕಾಯುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲಿಯೇ ನಡೆಯಲಿದೆ. ನವೆಂಬರ್ 10 ರಂದು ವಿಧಾನಸಭಾ  ಉಪ ಚುನಾವಣೆ  ಫಲಿತಾಂಶ ಪ್ರಕಟವಾದ ಬಳಿಕ ಈ ಸಂಬಂಧ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ನವೆಂಬರ್ 10 ರಂದು ಈ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ. ನಂತರ ದೆಹಲಿಗೆ ತೆರಳಿ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಕೇಂದ್ರ  ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಆದಷ್ಟು ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಈ ಹಿಂದೆ ಸೆಪ್ಟೆಂಬರ್ ತಿಂಗಳಲ್ಲಿ ಕ್ಯಾಬಿನೆಟ್ ವಿಸ್ತರಣೆಗೆ ಹೈಕಮಾಂಡ್ ಅನುಮೋದನೆ ಪಡೆಯಲು ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿದ್ದರು, ಆದರೆ ಯಾವುದೇ ಸೂಚನೆ ಸಿಗದೆ ವಾಪಸ್ಸಾಗಿದ್ದರು. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬಿತವಾಗಿದೆ ಎಂದು ಹೇಳುವ ಮೂಲಕ ಸಂಪುಟ ಪುನರ್ ರಚನೆಯ ಸುಳಿವನ್ನು ಯಡಿಯೂರಪ್ಪ ನೀಡಿದ್ದರು. ಅನೇಕ ಆಕಾಂಕ್ಷಿಗಳಿರುವುದಾಗಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ 77 ವರ್ಷದ ಯಡಿಯೂರಪ್ಪ ಅವರಿಗೆ ಹಗ್ಗದ ಮೇಲಿನ ನಡಿಗೆಯಂತಾಗಿಸಿದೆ.

ಈ ಮಧ್ಯೆ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಹಾಗೂ ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬರಲು ನೆರವು ನೀಡಿರುವ  ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್, ಶಾಸಕರಾದ ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಸಂಪುಟ ಸೇರುವ ಆಕಾಂಕ್ಷಿಗಳಾಗಿದ್ದಾರೆ. ಒಪ್ಪಂದದ ಪ್ರಕಾರ, ಮುನಿರತ್ನ ಒಂದು ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಗೆದ್ದರೆ ಅವರಿಗೂ ಸಂಪುಟದಲ್ಲಿ ಸ್ಥಾನ ನೀಡಬೇಕಾಗಿದೆ. ಮಾಸ್ಕಿ ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಗೆದ್ದರೆ ಅವರಿಗೂ ಸ್ಥಾನ ನೀಡಬೇಕಾಗುತ್ತದೆ. ಪ್ರಸ್ತುತ ಸಂಪುಟದಲ್ಲಿ 28 ಸದಸ್ಯರಿದ್ದು, ಆರು ಸ್ಥಾನಗಳು ಖಾಲಿ ಉಳಿದಿವೆ.

ಈ ಮಧ್ಯೆ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸಲಾಗುತ್ತದೆ ಎಂಬಂತಹ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಇಂತಹ ವದಂತಿಗಳನ್ನು ರಾಜ್ಯ ಬಿಜೆಪಿ ತಳ್ಳಿಹಾಕಿದೆ. ಒಟ್ಟಾರೇ, ರಾಜ್ಯ ಬಿಜೆಪಿಯಲ್ಲಿನ ಮುಂದಿನ ವಿದ್ಯಮಾನಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com