ಉಪಚುನಾವಣೆ ಫಲಿತಾಂಶ: ಆರ್.ಆರ್.ನಗರ, ಶಿರಾ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ; ಕಾಂಗ್ರೆಸ್, ಜೆಡಿಎಸ್ ಹಿನ್ನಡೆ

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮೊದಲ ಹಂತದ ಮತಎಣಿಕೆಯಲ್ಲಿ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. 
ಮುನಿರತ್ನ
ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮೊದಲ ಹಂತದ ಮತಎಣಿಕೆಯಲ್ಲಿ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. 

ಶಿರಾ ಕ್ಷೇತ್ರದ ಮತ ಎಣಿಕೆಯು ತುಮಕೂರಿನ  ಸರ್ಕಾರಿ ಪಾಲಿಟೆಕ್ನ್ ಕಾಲೇಜಿನಲ್ಲಿ ನಡೆಯುತ್ತಿದ್ದರೆ, ಆರ್ .ಆರ್.ನಗರದ ಮತ ಎಣಿಕೆ ಕಾರ್ಯ ಜ್ಞಾನಾಕ್ಷಿ ವಿದ್ಯಾ ನಿಕೇತನ್ ಶಾಲೆಯಲ್ಲಿ ನಡೆಯುತ್ತಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಮೂರು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 6418 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ 15110 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಕುಸುಮಾಗೆ 8692 ಮತಗಳು ಲಭ್ಯವಾಗಿದೆ.

ಇನ್ನು ಶಿರಾ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಲ್ಕನೆ ಸುತ್ತಿನಲ್ಲೂ 1519 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 11,770 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ 10251 ಮತಗಳು, ಜೆಡಿಎಸ್ ಅಭ್ಯರ್ಥಿ 6614 ಮತಗಳನ್ನು ಪಡೆದುಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿ ನಿಂತಿದ್ದು, ಪ್ರಮುಖವಾಗಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಅಭ್ಯರ್ಥಿಗಳಿಗೆ ಮಾತ್ರವಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಪ್ರತಿಷ್ಠೆಯಾಗಿದೆ. 

ಮತಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಿರಾ ಕ್ಷೇತ್ರದಲ್ಲಿ ಕೇಂದ್ರ ಶಸ್ತ್ರಾಸ್ತ್ರ ಪಡೆ, ಕೆಎಸ್ಆರ್'ಪಿ ತುಕಡಿ ಮತ್ತು ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೂವರು ಡಿಸಿಪಿ, 8 ಎಸಿಪಿ, 41 ಇನ್ಸ್'ಪೆಕ್ಟರ್, 105 ಪಿಎಸ್ಐ, 179 ಎಎಸ್ಐ, 183 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ 1670 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com