ಉಪ ಚುನಾವಣೆ: ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ.
ಉಪ ಚುನಾವಣೆ: ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ.

ನಾಮಪತ್ರ ಸಲ್ಲಿಕೆಗೆ ಇನ್ನು ಎರಡೇ ದಿನ ಬಾಕಿ ಇರುವಾಗ ನಾಮಪತ್ರ ಸಲ್ಲಿಕೆ ಕೂಡ ಚುರುಕುಪಡೆದುಕೊಂಡಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಇಂದು ರಾಜರಾಜೇಶ್ವರಿನಗರ ಬಿಬಿಎಂಪಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಮುನಿರತ್ನ ಅವರೊಂದಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕಂದಾಯ ಸಚಿವ ಆರ್.‌ಅಶೋಕ ಆಗಮಿಸಿದ್ದರು. ಇದಕ್ಕೂ ಮೊದಲು ಮುನಿರತ್ನ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಫಾರಂ ನೀಡಿದರು. ಬಳಿಕ ಗಣೇಶನ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಯಿತು.

ಕೃಷ್ಣಮೂರ್ತಿ ಅವರೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ‌ ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಇದ್ದರು.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಐಎಎಸ್‌ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕೂಡ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮೊದಲು ಕುಸುಮಾ ಅವರು ಬೆಳಗ್ಗೆ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಹಿಂಭಾಗದಲ್ಲಿರುವ ಆಂಜನೇಯಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಶಿರಾ ಕ್ಷೇತ್ರ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಇತರ ನಾಯಕರು ಉಪಸ್ಥಿತರಿದ್ದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಣಕ್ಕಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com