ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರದ ನಾಯಕರ ಜತೆ ಚರ್ಚೆ ನಡೆಸಿದ್ದು, ವರಿಷ್ಠರ ಸಂದೇಶಕ್ಕಾಗಿ ತಾವು ಕಾಯುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರದ ನಾಯಕರ ಜತೆ ಚರ್ಚೆ ನಡೆಸಿದ್ದು, ವರಿಷ್ಠರ ಸಂದೇಶಕ್ಕಾಗಿ ತಾವು ಕಾಯುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತಿಳಿಸಿದ್ದಾರೆ.

ಕೊರೋನಾ ಸೋಂಕು ಪತ್ತೆಗಾಗಿ ಸಾಯಿ ಹೆಲ್ತ್ ಟೆಕ್ನಾಲಜಿ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಉದ್ಘಾಟಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವರಿಷ್ಠರಿಂದ ಸೂಚನೆ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆಯಾಗಲಿದೆ. ಆದರೆ ಈವರೆಗೆ ತಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಇಂದು ಲೋಕಾರ್ಪಣೆ ಮಾಡಿರುವ ಸುಸಜ್ಜಿತ ಸಂಚಾರ ಪ್ರಯೋಗಾಲಯ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದರು.

ಸಾಯಿ ಹೆಲ್ತ್ ಟೆಕ್ನಾಲಜಿ ಸಂಸ್ಥೆ 65 ಲಕ್ಷ ರೂ ವೆಚ್ಚದಲ್ಲಿ ಇಂತಹ ಪ್ರಯೋಗಾಲಯ ಸ್ಥಾಪಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಇಂತಹ ತಲಾ ಒಂದು ಪ್ರಯೋಗಾಲಯ ನೀಡುವುದಾಗಿ ಭರವಸೆ ನೀಡಿದೆ. ಇದರಿಂದ ಸೋಂಕು ಪತ್ತೆಗೆ ನೆರವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಆರೋಗ್ಯವಂತರೂ ಸಹ ಸೋಂಕಿಗೆ ಬಲಿಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆರೋಗ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಸುರಕ್ಷತಾ ಕ್ರಮಗಳ ಮೂಲಕ ಸೋಂಕು ನಿಯಂತ್ರಣಕ್ಕೆ ಜನತೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಳಿದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಹೆಚ್ಚಿನ ಪ್ರಮಾಣದ ಜೀವ ಹಾನಿಯಾಗಿಲ್ಲ, ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರದಿಂದಲೂ ಪ್ರವಾಹ ನಿಯಂತ್ರಣಕ್ಕೆ ಸೂಕ್ತ ನೆರವಿನ ನಿರೀಕ್ಷೆಯಲ್ಲಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com