ಸಿಎಂ ಯಡಿಯೂರಪ್ಪಗೆ ಕೊರೋನಾ ಸೋಂಕು: ನಾಳೆ ಕರೆದಿದ್ದ ಸರ್ವಪಕ್ಷ ಸಭೆ ರದ್ದು
ಬೆಂಗಳೂರು: ಕೋವಿಡ್ ನಿಯಂತ್ರಣ ಕುರಿತಂತೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಮುಖ್ಯಮಂತ್ರಿಯವರಿಗೆ ಕೊವಿಡ್ ಸೋಂಕು ತಗುಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪರ ಪ್ರಚಾರಕ್ಕೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ತೀವ್ರ ಜ್ವರ, ಸುಸ್ತು ಉಂಟಾಗಿ ಅರ್ಧಕ್ಕೆ ಪ್ರವಾಸವನ್ನು ಮೊಟಕುಗೊಳಿಸಿ ಬಂದಿದ್ದರು.
ಬೆಂಗಳೂರಿಗೆ ಬಂದು ಆರಂಭದಲ್ಲಿ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಕೊರೋನಾ ಪಾಸಿಟಿವ್ ಕಂಡುಬಂದು ಈಗ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ನಿನ್ನೆ 14 ಸಾವಿರದ 859 ಮಂದಿಗೆ ಕೊರೋನಾ ಪಾಸಿಟಿವ್ ಬಂದು ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದರು, ಅದೀಗ ರದ್ದಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ


