ಯುವ ಕಾಂಗ್ರೆಸ್ ಉಪಾಧ್ಯಕ್ಷೆಗೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಧಮ್ಕಿ; ದೂರು ದಾಖಲು

ಕಾಂಗ್ರೆಸ್ ಯುವ ನಾಯಕ ಮೊಹಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡ್ಡಿಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ದೂರು ನೀಡಿದ್ದಾರೆ
ಮೊಹಮದ್ ನಲಪಾಡ್
ಮೊಹಮದ್ ನಲಪಾಡ್

ಬೆಂಗಳೂರು: ಕಾಂಗ್ರೆಸ್ ಯುವ ನಾಯಕ ಮೊಹಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡ್ಡಿಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ದೂರು ನೀಡಿದ್ದಾರೆ.

ಕೋವಿಡ್ ವಾರ್ ರೂಂ ರಚನೆ ಮಾಡುವ ವಿಚಾರದಲ್ಲಿ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ಭವ್ಯಾ ಅವರಿಗೆ ನಲಪಾಡ್ ಮತ್ತು ಆತನ ಆಪ್ತರು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ, ನಲಪಾಡ್ ಮತ್ತು ಇತರರ ವಿರುದ್ಧ ಭವ್ಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬುಧವಾರ ಸಂಜೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಂ ನಿರ್ಮಾಣದ ಕೆಲಸದ ವೇಳೆ ಅಡ್ಡಿಪಡಿಸಿ ನಲಪಾಡ್ ಭವ್ಯಗೆ ಧಮ್ಕಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. 

ನಲಪಾಡ್ ಹಾಗೂ ಬೆಂಬಲಿಗರ ಬೆದರಿಕೆ, ಧಮ್ಕಿ ಹಾಗೂ ಗಲಾಟೆ ಹಿನ್ನಲೆಯಲ್ಲಿ ಭವ್ಯ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿ ಬೆದರಿಕೆ ಬಗ್ಗೆ ಸಂಪೂರ್ಣ ವಿವರವನ್ನು ಉಲ್ಲೇಖಿಸಿದ್ದಾರೆ.

ಶಾಸಕರಾದ ಹಾರಿಸ್ ರವರ ಮಗ ಮೊಹಮ್ಮದ್ ನಲಪಾಡ್, ಭಾಸ್ಕರ್, ಗೋವರ್ಧನ್, ಆಗಸ್ಟಿನ್ ಹಾಗೂ ಇತರೆ 15ಕ್ಕೂ ಹೆಚ್ಚು ಜನರ ವಿರುದ್ಧ ಭವ್ಯ ದೂರು ನೀಡಿದ್ದಾರೆ. ಯುವ ಕಾಂಗ್ರೆಸ್ ಕಚೇರಿಗೆ ಏಕಾಏಕಿಯಾಗಿ ಬಂದು ನನ್ನನ್ನು ಗುರಿಯಾಗಿಸಿಕೊಂಡು ಬೈಯ್ದು, ಹೊಡೆಯುವ ಹಾಗೆ ಕೈ ತೋರಿಸಿದ್ದಾರೆ. ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಭವ್ಯ ಆರೋಪ ಮಾಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com