ಬಿಜೆಪಿಗೆ ಅಸತ್ಯ- ಹಿಂಸೆಯೇ ರೋಲ್ ಮಾಡಲ್: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ನಾಯಕರು ಅಸತ್ಯ ಮತ್ತು ಹಿಂಸಾ ಹಾದಿಯಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಬಿಜೆಪಿ ನಾಯಕರು ಅಸತ್ಯ ಮತ್ತು ಹಿಂಸಾ ಹಾದಿಯಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಕೇಸರಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯುವುದಾರು ಹೇಗೆ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಮತ್ತು ನಡೆ ತದ್ವಿರುದ್ಧವಾಗಿವೆ. ಅವರು ಏನು ಹೇಳುತ್ತಾರೋ ಅದಕ್ಕೆ ವಿರುದ್ಧದ ಕೆಲಸ ಮಾಡುತ್ತಾರೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ದೇಶದಲ್ಲಿ ಇಂದು ಪ್ರಜಾತಂತ್ರ ವ್ಯವಸ್ಥೆ ಉಳಿದಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಸುಳ್ಳು ಆಪಾದನೆಯಡಿ ಜೈಲಿಗೆ ಅಟ್ಟಲಾಗುತ್ತಿದೆ ಎಂದರು.

ಕಳೆದ 10 ತಿಂಗಳುಗಳಿಂದ ರೈತರು ದೇಶದಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ‘ಜೈ ಜವಾನ್, ಜೈ ಕಿಸಾನ್’ ಎಂಬ ಕರೆ ನೀಡಿದರು. ರೈಲು ದುರಂತ ಸಂಭವಿಸಿದಾಗ ಘಟನೆಯ ನೈತಿಕ ಹೊಣೆ ಹೊತ್ತು ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಲಾಲ್ ಬಹದ್ದೂರ್ ಶಾಸ್ತ್ರಿ. ಈಗಿನ ರಾಜಕಾರಣದಲ್ಲಿ ನೈತಿಕತೆ ಕಣ್ಮರೆಯಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com