ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಯಾವುದೇ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ತಾವು ಸೀಮಿತವಾಗುವುದಾಗಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ, ತಮಗೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡಲಾಗಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, "ಇಲ್ಲ, ರಾಷ್ಟ್ರ ರಾಜಕಾರಣ ಪ್ರವೇಶಿಸುವ ಯಾವುದೇ ಯೋಚನೆ ಇಲ್ಲ. ನಾನು ಕರ್ನಾಟಕದಲ್ಲಿಯೇ ಉಳಿಯುತ್ತೇನೆ ಎಂದರು.
ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಇದು ರಹಸ್ಯವಾಗಿ ಉಳಿದಿಲ್ಲ.
ಸಿದ್ದರಾಮಯ್ಯ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ.
Advertisement