ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್- ಶಿವರಾಜ ಸಜ್ಜನರ್, ಸಿಂಧಗಿಗೆ ರಮೇಶ್ ಭೂಸನೂರ್ ಅಭ್ಯರ್ಥಿ
ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಸಿಂಧಗಿಗೆ ರಮೇಶ್ ಭೂಸನೂರ ಹಾಗೂ ಹಾನಗಲ್‌ಗೆ ಶಿವರಾಜ್ ಸಜ್ಜನ್ ಇವರುಗಳನ್ನು ಅಭ್ಯರ್ಥಿಗಳೆಂದು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ.
ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.
ಮಾಜಿ ಸಚಿವ ದಿ. ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಲ್ಲಿ ಪೈಪೋಟಿ ಹೆಚ್ಚಾಗಿತ್ತು. ಹೀಗಾಗಿ ಆ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಡುವುದು ಎಂಬುದು ರಾಜ್ಯ ಬಿಜೆಪಿ ನಾಯಕರಿಗೆ ಸವಾಲಿನ ವಿಷಯವಾಗಿತ್ತು. ಆದರೆ ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ತೀವ್ರ ಪೈಪೋಟಿಯಿತ್ತು. ಹೀಗಾಗಿ ಅಳೆದು ತೂಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಸಂಸದ ಶಿವಕುಮಾರ್ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಸ್ಥಳೀಯ ಬಿಜೆಪಿ ನಾಯಕ ಕಲ್ಯಾಣ್ ಕುಮಾರ್ ಶೆಟ್ಟರ್ ಹಾಗೂ ಹಾವೇರಿ ಕ್ಷೇತ್ರದ ಮಾಜಿ ಶಾಸಕ ಶಿವರಾಜ ಸಜ್ಜನರ್ ಅವರಲ್ಲಿ ಒಬ್ಬರಿಗೆ ಟಿಕೆಟ್ ಕೊಡುವಂತೆ ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿತ್ತು.ಅದರಂತೆ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಶಿವರಾಜ್‌ಸಜ್ಜನ್ ಹೆಸರಿಗೆ ಅಂಕಿತ ಹಾಕಿದೆ.
ವಿಜಯಪುರ ಜಿಲ್ಲೆ ಸಿಂದಗಿ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗೆ ಪೈಪೋಟಿ ಇತ್ತು. ಆದರೆ ಮಾಜಿ ಶಾಸಕ ರಮೇಶ್ ಭೂಸನೂರ ಅವರಿಗೆ ಬಿಜೆಪಿ ಟಿಕೆಟ್ ಕೊಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ. ರಮೇಶ್ ಭೂಸನೂರು ಜೊತೆಗೆ ಸಿದ್ದು ಬಿರಾದಾರ್ ಹಾಗೂ ಸಂಗನಗೌಡ ಪಾಟೀಲ್ ಅವರ ಹೆಸರುಗಳನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿತ್ತು.ಅದರಂತೆ ರಮೇಶ ಭೂಸನೂರ ಹೆಸರನ್ನು ಸಮಿತಿ ಅಖೈರುಗೊಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ