ನಾಳೆ ಬಿಜೆಪಿ ಸ್ಥಾಪನಾ ದಿನ: ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ
ಪಂಚರಾಜ್ಯಗಳ ಚುನಾವಣಾ ರ್ಯಾಲಿಗಳಿಂದ ಕೊಂಚ ವಿರಾಮ ಪಡೆದುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Published: 05th April 2021 07:45 AM | Last Updated: 05th April 2021 07:45 AM | A+A A-

ಪ್ರಧಾನ ಮಂತ್ರಿ ನರೇಂದ್ರ ಮೋದಿ
ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ರ್ಯಾಲಿಗಳಿಂದ ಕೊಂಚ ವಿರಾಮ ಪಡೆದುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಾಳೆ ಬಿಜೆಪಿಯ ಸ್ಥಾಪನಾ ದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡ ಅವರ ಜೊತೆ ದೇಶಾದ್ಯಂತ ಇರುವ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಇದಕ್ಕಾಗಿ ಪ್ರತಿ ರಾಜ್ಯ ಘಟಕ ಸಿದ್ಧತೆ ಮಾಡಿಕೊಳ್ಳುತ್ತಿದೆ.
ತಮಿಳು ನಾಡು ಸೇರಿದಂತೆ 5 ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ನಾಳೆಯ ಸಂವಾದದಲ್ಲಿ ಪ್ರಧಾನಿ ಮೋದಿಯವರು ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸುವ ರೀತಿಯಲ್ಲಿ ಮಾತನಾಡಬಹುದು.
ನಾಳೆ ಬೆಳಗ್ಗೆ 10.30ಕ್ಕೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿಯವರು ಮಾತುಗಳನ್ನು ಆರಂಭಿಸಲಿದ್ದಾರೆ. ನಾಳೆ ಬಿಜೆಪಿಯ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ, ಹಿರಿಯ ನಾಗರಿಕರನ್ನು ಗುರುತಿಸುವಿಕೆ, ಮೆರಿಟ್ ವಿದ್ಯಾರ್ಥಿಗಳಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.