ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಎಸ್‌ವೈ, ಹೆಚ್‌ಡಿಕೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ ಬೊಮ್ಮಾಯಿ

ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿಯವರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿ ಬೊಮ್ಮಾಯಿಯವರು, ಜಿಲ್ಲೆಗಳಲ್ಲಿ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯ ಅಂತಿಮ ವಿವರಗಳನ್ನು ಎರಡೂ ಪಕ್ಷಗಳ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಈ ನಡುವೆ ಬೀದರ್, ರಾಯಚೂರು, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಜೆಡಿಎಸ್ ಬಿಜೆಪಿಗೆ ಸಹಾಯ ಮಾಡಲಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಹಿಡಿತವನ್ನು ಹೊಂದಿದ್ದು, ಎರಡೂ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಗಳು ಕಡಿಮೆ ಇದೆ. ಅಲ್ಲದೆ, ಈ ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಅವರು, ಜೆಡಿಎಸ್ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿದ್ದರು.

ಎಂಎಲ್'ಸಿ ಚುನಾವಣೆಗೆ ಒಂದು ವಾರ ಬಾಕಿ ಇದ್ದು, ಈ ನಡುವಲ್ಲೇ ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ತಗ್ಗಿಸಲು ಬಿಜೆಪಿ ಮತ್ತು ಜೆಡಿಎಸ್ ಎರಡೂ ತಂತ್ರಗಳನ್ನು ರೂಪಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com