ಕಟ್ಟುವುದು ಮನುಷ್ಯತ್ವ, ಕೆಡವುದು ರಾಕ್ಷಸತ್ವ: ಸಿದ್ದು ಕುಟುಕಿದ ಎಚ್ ಡಿಕೆ!
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಕೋಳಿ ಜಗಳ ಮುಂದುವರೆದಿದೆ. ಮೈತ್ರಿ ಸರ್ಕಾರ ರಚನೆ ಮಾಡಲು ಜೆಡಿಎಸ್ ನವರ ಮನೆ ಬಾಗಿಲಿಗೆ ಹೋಗಿಲ್ಲ. ವರಿಷ್ಠರ ಜೊತೆಗೆ ಮಾತುಕತೆ ಆಗಿದ್ದು, ನಿಜ. ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಸಿದ್ದರಾಮಯ್ಯ ಕೋಲಾರದ ನೀಡಿದ್ದ ಹೇಳಿಕೆ ಬಗ್ಗೆ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ ನಾಯಕರು ಮತ್ತು ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಿರುವ ಸಿದ್ದರಾಮಯ್ಯ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
'ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ ಎಂದು ಪ್ರಶ್ನಿಸಿದ್ದಾರೆ.
ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು ಎಂದಿದ್ದಾರೆ.
ಅಹಾ!! ʼಕೋಲಾರದಲ್ಲಿ ಕಲರ್‌ಫುಲ್ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್‌ಮೆಂಟ್ ರಾಜಕಾರಣʼದ ಹರಿಕಾರರು ನೀವಲ್ಲವೇ? ವಿನಾಶಕಾಲೇ ವಿಪರೀತ ಸುಳ್ಳು! ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ