2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
Published: 23rd February 2021 08:00 AM | Last Updated: 23rd February 2021 02:27 PM | A+A A-

ಜನಧ್ವನಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು
ಉಡುಪಿ: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹೆಜಮಾಡಿಯಿಂದ ಬೈಂದೂರುವರೆಗೆ ಹಮ್ಮಿಕೊಂಡಿರುವ 108ಕಿ.ಮೀ. ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿದ್ದಾಗ ಜನಸ್ನೇಹಿ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತಂದಿತ್ತು. ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆತರಲಾಗಿದ್ದ ಅನ್ನಭಾಗ್ಯ ಯೋಜನೆ ಜನರ ಮನಗೆದ್ದಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ಪ್ರತೀಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಗಳಾಗಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಾಕಷ್ಟು ಕಾಂಗ್ರೆಸ್ ನಾಯಕರು ತಮ್ಮ ಜೀವವನ್ನು ನೀಡಿದ್ದಾರೆ. ಆದರೆ, ಈ ಚಳುವಳಿಯಲ್ಲಿ ಆರ್'ಎಸ್ಎಸ್'ನ ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿಲ್ಲ ಎಂದಿದ್ದಾರೆ.