
ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಶರತ್ ಬಚ್ಚೇಗೌಡ ಅವರು ಪಕ್ಷೇತರ ಶಾಸಕರಾಗಿರುವುದರಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶರತ್ ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಹಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.