ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ
ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published: 20th January 2021 04:06 PM | Last Updated: 20th January 2021 04:06 PM | A+A A-

ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು
ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಮೆಜೆಸ್ಟಿಕ್ನಿಂದ ಆರಂಭವಾದ ಕಾಂಗ್ರೆಸ್ ರ್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ ಪರಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮಹಾರಾಣಿ ಕಾಲೇಜ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು.
ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಹೀಗಾಗಿ ಬೆಂಗಳೂರು–ಮೈಸೂರು ಹೆದ್ದಾರಿ, ಆನಂದರಾವ್ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.