ನಾಳೆ ನೂತನ ಸಿಎಂ ಆಯ್ಕೆ ಸಾಧ್ಯತೆ, ಇಂದು ಸಂಜೆ ದೆಹಲಿಯಿಂದ ಬೆಂಗಳೂರಿಗೆ ಬಿಜೆಪಿ ವೀಕ್ಷಕರು
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕಕ್ಕೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದು,
Published: 26th July 2021 05:01 PM | Last Updated: 26th July 2021 05:01 PM | A+A A-

ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕಕ್ಕೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಚರ್ಚಿಸಲು ಇಂದು ಸಂಜೆಯೇ ದೆಹಲಿಯಿಂದ ಬಿಜೆಪಿ ವೀಕ್ಷಕರು ಆಗಮಿಸುತ್ತಿದ್ದಾರೆ.
ಈಗಾಗಲೇ ಸಿಎಂ ರೇಸ್ನಲ್ಲಿ ಹಲವು ನಾಯಕರ ಹೆಸರುಗಳು ಕೇಳಿ ಬರುತ್ತಿದ್ದು, ಅಂತಿಮವಾಗಿ ಯಾರಿಗೆ ಪಟ್ಟ ಕಟ್ಟಬೇಕು ಎಂಬ ಕುರಿತು ಚರ್ಚೆ ನಡೆಯುತ್ತಲೇ ಇದೆ.
2023ರ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ಆಯ್ಕೆ ನಡೆಯಬೇಕಿರುವ ಹಿನ್ನಲೆಯಲ್ಲಿ ಈ ಕುರಿತು ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂತರ ಬಿಜೆಪಿ ಕರ್ನಾಟಕ ಘಟಕದ ಬೆಳವಣಿಗೆಗಳನ್ನು ಗಮನಿಸಲೆಂದು ಬಿಜೆಪಿ ಹೈಕಮಾಂಡ್ ವೀಕ್ಷಕರನ್ನು ನೇಮಿಸಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.
ಬಿಜೆಪಿಯ ಕರ್ನಾಟಕ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಿಸಲಾಗಿದ್ದು, ಹೈಕಮಾಂಡ್ನಿಂದ ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು, 'ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಿ.ಎಸ್.ಯಡಿಯೂರಪ್ಪ ಅವರೇ ಹೇಳುತ್ತಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಎರಡು ವರ್ಷ ತುಂಬಿದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.