ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಮರುಚಿಂತನೆ ನಡೆಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ

ಕೊರೋನಾ 2ನೇ ಅಲೆ ನಡುವೆಯೇ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ನಿರ್ಧರಿಸುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಮರುಚಿಂತನೆ ನಡೆಸುವಂತೆ ಆಗ್ರಹಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ 2ನೇ ಅಲೆ ನಡುವೆಯೇ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ನಿರ್ಧರಿಸುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಮರುಚಿಂತನೆ ನಡೆಸುವಂತೆ ಆಗ್ರಹಿಸಿವೆ. 

ಸರ್ಕಾರದ ನಿರ್ಧಾರ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರ ಬುದ್ಧಿ ಭ್ರಮಣೆಯ ನಿರ್ಧಾರ ಎಂದು ಟೀಕಿಸಿದ್ದಾರೆ. 

ಸರ್ಕಾರ ಕೂಡಲೇ ಇಂತಹ ಮತಿಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ಎಸ್ಎಲ್'ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. 

ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸಲೀಂ ಅಹ್ಮದ್ ಅವರು ಮಾತನಾಡಿ, ಕೊರೋನಾ ಸಾಂಕ್ರಾಮಿಕ ರೋಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಮಕ್ಕಳಿಗೆ ಲಸಿಕೆಗಳನ್ನು ನೀಡಿಲ್ಲ. ಈ ಸಂದರ್ಭದಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಯುವುದು ಅಪಾಯಕರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದಂತೆಯೇ ಎಸ್ಎಸ್ಎಲ್'ಸಿ ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com