ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕುತೂಹಲ ಮೂಡಿಸಿದ ಸಚಿವ ಯೋಗೇಶ್ವರ್ ಹೇಳಿಕೆ!

ಈಗಾಗಲೇ ಪರೀಕ್ಷೆ ಬರೆಯಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ನೀಡಿರುವ ಹೇಳಿದ್ದಾರೆ.
ಸಿಪಿ ಯೋಗೇಶ್ವರ್
ಸಿಪಿ ಯೋಗೇಶ್ವರ್

ಬೆಂಗಳೂರು: ಈಗಾಗಲೇ ಪರೀಕ್ಷೆ ಬರೆಯಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ನೀಡಿರುವ ಹೇಳಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ರಾಜ್ಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಯೋಗೇಶ್ವರ್ ಅವರು ಮಾತುಕತೆ ನಡೆಸಿದ್ದರು. ಭೇಟಿ ಬಳಿಕ ಯೋಗೇಶ್ವರ್ ಅವರು ನೀಡಿರುವ ಈ ಹೇಳಿಕೆ ಇದೀಗ ಕುತೂಹಲ ಮೂಡಿಸಿದೆ. 

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವೈಯಕ್ತಿಕ ಸಮಸ್ಯೆ, ರಾಜ್ಯ ಸರ್ಕಾರ ಮತ್ತು ಪಕ್ಷದ ಮೂಲಭೂತ ಸಮಸ್ಯೆಗಳ ಬಗ್ಗೆ ಹೈಕಮಂಡ್‌ಗೆ ವಿವರಣೆ ನೀಡಿದ್ದೇನೆ. ಸರ್ಕಾರ ಹಾಗೂ ಪಕ್ಷದ ಮೂಲಭೂತ ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಏನೇ ಆಗಲಿ ಪರೀಕ್ಷೆ ಬರೆಯಲಾಗಿದ್ದು, ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. 

ಒಬ್ಬ ಜವಾಬ್ದಾರಿ ಸಚಿವನಾಗಿ ನಾನು ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದೇನೆ. ನನ್ನ ವೈಯಕ್ತಿಕ ನೋವುಗಳು ಹಾಗೂ ಸಮಸ್ಯೆಗಳನ್ನು ನಮ್ಮ ದೆಹಲಿ ನಾಯಕರ ಮುಂದೆ ಹೇಳಿದ್ದೇನೆ. ಪಕ್ಷಕ್ಕೆ ಧಕ್ಕೆ ಉಂಟಾಗಬಾರದು ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಹಿನ್ನಲೆಯಲ್ಲಿ, ನಾಲ್ಕು ಗೋಡೆಗಳ ಮಧ್ಯೆ ವಿವರಣೆ ನೀಡಿದ್ದೇನೆಂದು ತಿಳಿಸಿದ್ದಾರೆ. 

ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ನನಗೆ ತುಂಬಾ ತೊಂದರೆ ಆಗುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ನಾಯಕರು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅಡ್ಜೆಸ್ಟ್‌ಮೆಂಟ್‌ ಪಾಲಿಟಿಕ್ಸ್‌ ಬೇಡ. ಅದಕ್ಕೆ ಕೊನೆ ಹಾಡಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅತಿ ಉತ್ತಮ ಸರ್ಕಾರ ಇರಬೇಕು. ಪಕ್ಷದ ಸಂಘಟನೆ ಪ್ರಬಲವಾಗಿರಬೇಕು. ರಾಜ್ಯದ ಇತರ ಭಾಗಗಳಂತೆ ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಬಲವಾಗಿ ಬೇರೂರಬೇಕು ಎಂದು ತಿಳಿಸಿದರು.

ನನಗೆ ಕೋಲಾರ ಜಿಲ್ಲೆ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಸದ್ಯಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಇದ್ದಾರೆ. ನನಗೆ ಕೋಲಾರ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದರು.

ಈ ಎಲ್ಲಾ ಬೆಳವಣಿಗೆ ನಡುವಲ್ಲೇ ನಿನ್ನೆ ಬೆಳಗ್ಗೆ 6.30ರ ಸುಮಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದ್ದಕ್ಕಿದ್ದಂತೆ ಕಾರಿನಲ್ಲಿ ತೆರಳಿ, ಆರ್'ಟಿ ನಗರಕ್ಕೆ ತೆರಳಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರ ನಿವಾಸಕ್ಕೂ ಭೇಟಿ ನೀಡಿದ್ದು, ಬೆಳಿಗ್ಗೆ 9.30ಕ್ಕೆ ಮನೆಗೆ ಮರಳಿದ್ದರು ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. 

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಮಾಹಿತಿ ನೀಡಿ, ಮುಖ್ಯಮಂತ್ರಿಗಳು ಶುಕ್ರವಾರ ಬೆಳಗ್ಗೆ ಯಾರನ್ನೂ ಭೇಟಿ ಮಾಡಿಲ್ಲ. ಅಧಿಕೃತ ಅಥವಾ ಖಾಸಗಿ ಕಾರುಗಳಲ್ಲಿ ಪ್ರಯಾಣಿಸಿಲ್ಲ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com