ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವುದಿಲ್ಲ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ ಚರ್ಚೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
Published: 19th March 2021 11:21 PM | Last Updated: 20th March 2021 12:37 PM | A+A A-

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ ಚರ್ಚೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಚರ್ಚೆಯ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು. ಕೇಂದ್ರ ಸಮಿತಿಯು ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.
ನಗರದ ಕೆ.ಕೆ.ಗೆಸ್ಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ನಾನಾಗಲೀ, ನಮ್ಮ ಕಾರ್ಯಕರ್ತರಾಗಲೀ ಗಂಭೀರವಾಗಿ ಪರಿಗಣಿಸುವುದಿಲ್ಲ. ಯತ್ನಾಳ್ ಮಾತನಾಡುವುದನ್ನು ನಿಲ್ಲಿಸುವುದಿಲ್ಲ. ಅವರು ಮಾತನಾಡುತ್ತಲೇ ಇರುತ್ತಾರೆ ಎಂದು ಈ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಕರ್ನಾಟಕ ಭೇಟಿಯ ವೇಳೆ ಕಾಂಗ್ರೆಸ್ಸಿಗರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಕುರಿತು ಸುಳ್ಳು ಹೇಳಿದ್ದರು ಎಂದು ಅವರು ಆರೋಪಿಸಿದರು.
ನಿರಂತರ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಮುಖಂಡರು ಸಿ.ಡಿ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಹೊರಿಸು ತ್ತಿದ್ದಾರೆ. ಸಿಡಿ ಪ್ರಕರಣದಲ್ಲಿ ಆರೋಪ ಕೇಳಿಬಂದ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಆರೋಪ ಕೇಳಿದೊಡನೆ ರಾಜೀನಾಮೆ ಪಡೆಯುವ ಕ್ರಮ ನಮ್ಮಲ್ಲಿ ಮಾತ್ರ ಇದೆ. ಕಾಂಗ್ರೆಸ್ ಈ ರೀತಿ ಮಾಡುವುದಿಲ್ಲ. ಆದರೂ, ಕಾಂಗ್ರೆಸ್ ಪಕ್ಷದವರು ರಾಜಕೀಯವಾಗಿ ಸಿಡಿ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.