ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಹೈಕಮಾಂಡ್, ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ದೂರು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ...
Published: 31st March 2021 05:14 PM | Last Updated: 31st March 2021 05:14 PM | A+A A-

ಈಶ್ವರಪ್ಪ ಮತ್ತು ಯಡಿಯೂರಪ್ಪ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ.
ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರು ಲಿಖಿತ ದೂರು ನೀಡಿದ್ದಾರೆ.