ಮೇಕೆದಾಟು ಜಾರಿಗೆ ಆಗ್ರಹ: ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ

ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.

ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆ ನಡೆಸುವುದಾಗಿ ಘೋಷಿಸಿದರು.

ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಇಬ್ಬರೂ ನಾಯಕರೂ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಡಿಕೆ.ಶಿವಕುಮಾರ್ ಅವರು ಮಾತನಾಡಿ, ಮೇಕೆದಾಟು ಯೋಜನೆ ಆರಂಭಿಸಲು ಯಾವುದೇ ಕಾನೂನಿನ ತೊಡಕಿಲ್ಲ. ಹೀಗಿದ್ದರೂ ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಬಿಜೆಪಿ ಸರ್ಕಾರಗಳು ಬದ್ಧತೆ ಪ್ರದರ್ಶಿಸುತ್ತಿಲ್ಲ. ಇದರಿಂದ ನ್ಯಾಯಧೀಕರಣ ಮತ್ತು ಪ್ರಾಧಿಕಾರದ ಆದೇಶದ ಅನ್ವಯ ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಅನ್ಯಾಯವಾಗಿ ಸಮುದ್ರದ ಪಾಲಾಗಿ ಪೋಲಾಗುತ್ತಿದೆ. ಹೀಗಾಗಿ ಸರ್ಕಾರವನ್ನು ಎಚ್ಚರಿಸಲು 100 ಕಿಮೀ ಗೂ ಅಧಿಕ ದೂರದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಪಾದಯಾತ್ರೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆಂದು ಹೇಳಿದರು.

ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತಿತರ ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಈ ಪಾದಯಾತ್ರೆ ರಾಜಕೀಯ ಪ್ರೇರಿತವಲ್ಲ. ರಾಜ್ಯದ ಹಿತಾಸಕ್ತಿಗಾಗಿ ಆಗಿದೆ. ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ನಮ್ಮ ಜಾಗದಲ್ಲಿ ಯೋಜನೆ ಜಾರಿಮಾಡಲು, ಕಾನೂನಾತ್ಮಕವಾಗಿ ಯೋಜನೆ ಮಾಡಲು ನಮಗೆ ಅವಕಾಶವಿದೆ. ಹೀಗಾಗಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡ್ತೇವೆ. ಕೂಡಲೇ ಕೇಂದ್ರ ಪರಿಸರ ಇಲಾಖೆ ಇದಕ್ಕೆ ಕ್ಲಿಯರೆನ್ಸ್​ ಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ಯೋಜನೆ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತೇವೆ. ಡಿಸೆಂಬರ್​ ಮೊದಲ ವಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ. ಎಷ್ಟು ದಿನ ಪಾದಯಾತ್ರೆ ಎಂಬುದನ್ನು ಶೀಘ್ರದಲ್ಲೇ ತಿಳಿಸ್ತೇವೆ. ಇದು ವೋಟಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ. ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಕೈಗೊಂಡಿದ್ದೇವೆ. ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಯೋಜನೆಗೆ ವಿರೋಧ ಮಾಡ್ತಿದೆ. ಕಾಂಗ್ರೆಸ್ ಯಾವಾಗಲೂ ಕರ್ನಾಟಕ, ಕನ್ನಡಿಗರ ಪರ ಇರುತ್ತೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com