ಬಿಜೆಪಿ ನಾಯಕರ 'ಜನಸ್ವರಾಜ್ ಯಾತ್ರೆ'ಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ, ನಾಲ್ಕು ತಂಡಗಳಾಗಿ ರಾಜ್ಯ ಪ್ರವಾಸ

ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ...
'ಜನಸ್ವರಾಜ್' ಸಮಾವೇಶಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
'ಜನಸ್ವರಾಜ್' ಸಮಾವೇಶಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಬೆಂಗಳೂರು/ಕೊಪ್ಪಳ: ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಚಾಲನೆ ನೀಡಿದ್ದಾರೆ.

ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಲು, 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಲಿದ್ದು, 'ಜನಸ್ವರಾಜ್' ಯಾತ್ರೆ ಇಂದು ಚಾಲನೆ ನೀಡಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಮೂರು ದಿನಗಳ ಕಾಲ ಈ ಯಾತ್ರೆ ನಡೆಯಲಿದೆ. ರಾಜ್ಯ ನಾಯಕರ ಜೊತೆಗೆ ಆಯಾ ಭಾಗದ ಕೇಂದ್ರ ಸಚಿವರು, ಸಂಸದರು, ಶಾಸಕರು, ಮುಖಂಡರು ಜೊತೆ ಸೇರಲಿದ್ದಾರೆ. ನಾಲ್ಕು ಪ್ರಮುಖ ತಂಡಗಳನ್ನು ಜನಸ್ವರಾಜ್ ಯಾತ್ರೆಗೆ ರಚನೆ ಮಾಡಲಾಗಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಕುರಿತು ಜನಜಾಗೃತಿ ಮೂಡಿಸುವುದು, ವಿಧಾನ ಪರಿಷತ್ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಶೀಘ್ರ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಳಮಟ್ಟದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿಯನ್ನು ಬಲಪಡಿಸುವುದು ಯಾತ್ರೆಯ ಉದ್ದೇಶವಾಗಿದೆ. 

ಇಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜನಸ್ವರಾಜ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಳಿನ್‌ ಕುಮಾರ್‌ ನೇತೃತ್ವದ ತಂಡ ಈ ಭಾಗದಲ್ಲಿ ಪ್ರಚಾರ ನಡೆಸಲಿದೆ. 

ನಾಲ್ಕು ತಂಡಗಳು: ರಾಜ್ಯಾಧ್ಯಕ್ಷ ನಳಿನ್ ಕುಮಾರ್: ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ನೇತೃತ್ವದ ತಂಡದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಶಾಸಕರಾದ ರಾಜೂಗೌಡ, ಎನ್‌.ಮಹೇಶ್‌, ಪಕ್ಷದ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ, ಸಂಸದ ಪ್ರತಾಪ್‌ ಸಿಂಹ ಇರಲಿದ್ದಾರೆ. ಸಂಚಾಲಕರಾಗಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಎಸ್‌.ಕೇಶವ ಅವರು ಕಾರ್ಯನಿರ್ವಹಿಸಲಿದ್ದಾರೆ.

ಬಿ ಎಸ್ ಯಡಿಯೂರಪ್ಪ ತಂಡ: ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಪಕ್ಷದ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಎಂ.ಬಿ.ನಂದೀಶ್‌ ಇರಲಿದ್ದಾರೆ. ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌.ನವೀನ್‌ ಕಾರ್ಯನಿರ್ವಹಿಸಲಿದ್ದಾರೆ.

ಕೆ ಎಸ್. ಈಶ್ವರಪ್ಪ ತಂಡ: ಕೆ.ಎಸ್‌.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್‌.ಅಶೋಕ್‌, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌, ಮೀನುಗಾರಿಕೆ ಸಚಿವ ಎಸ್‌.ಅಂಗಾರ, ಶಾಸಕ ಅರವಿಂದ ಲಿಂಬಾವಳಿ, ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ ಇರಲಿದ್ದಾರೆ. ಸಂಚಾಲಕರಾಗಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ವಿನಯ್‌ ಬಿದರೆ ಕಾರ್ಯ ನಿರ್ವಹಿಸಲಿದ್ದಾರೆ.

ಜಗದೀಶ್ ಶೆಟ್ಟರ್‌ ತಂಡ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌, ಅಬಕಾರಿ ಸಚಿವ ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಂ.ರಾಜೇಂದ್ರ ಇರಲಿದ್ದಾರೆ. ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಮುನಿರಾಜು ಗೌಡ ಯಾತ್ರೆ ಕೈಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com