ಬಿಟ್ ಕಾಯಿನ್ ಪ್ರಕರಣ: ಶ್ರೀಕಿಗೆ ಕಾಂಗ್ರೆಸ್ ಮುಖಂಡರ ಜೊತೆ ನಂಟು- ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ
ಬಿಟ್‌ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ (ಶ್ರೀಕೃಷ್ಣ ರಮೇಶ್) ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾನೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.
Published: 29th November 2021 05:14 PM | Last Updated: 29th November 2021 05:14 PM | A+A A-

ಗೃಹ ಸಚಿವ ಆರಗ ಜ್ಞಾನೇಂದ್ರ
ಶಿವಮೊಗ್ಗ: ಬಿಟ್‌ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ (ಶ್ರೀಕೃಷ್ಣ ರಮೇಶ್) ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾನೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.
ಸಾಗರದ ಗಾಂಧಿ ಮೈದಾನದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆಯೇ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ವಿರುದ್ಧ ಆರೋಪ ಮಾಡುವುದು ಬಿಡ್ಡರೆ ಅವರಿಗೆ ಬೇರಾವುದೇ ಪ್ರಮುಖ ಕೆಲಸಗಳಿಲ್ಲ. ಹೀಗಾಗಿ ಬಿಟ್‌ಕಾಯಿನ್ ವಿಚಾರದಲ್ಲಿ ಪಕ್ಷ ನಮ್ಮ ಮೇಲೆ ಆರೋಪ ಮಾಡುತ್ತಿದೆ ಎಂದು ಹೇಳಿದರು. ಇದೇ ವೇಳೆ ಈ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಮುಖಂಡರು ಭಾಗಿಯಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯುಬಿ ಸಿಟಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಮಗನ ಜೊತೆ ಶ್ರೀಕಿ ಕಾಣಿಸಿಕೊಂಡಿದ್ದ. ನಂತರ ಗೋವಾದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕರ ಮಗನೊಬ್ಬನ ಜೊತೆ ಡ್ರಗ್ಸ್ ಪ್ರಕರಣದಲ್ಲಿ ಶ್ರೀಕಿ ಸಿಕ್ಕಿಬಿದ್ದಿದ್ದ. ಆಗ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದಾಗ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಆತನ ಮೇಲೆ ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿದ್ದು ಏಕೆ’ ಎಂದು ಪ್ರಶ್ನಿಸಿದರು.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬಿಟ್‌ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಅಲ್ಲದೆ, ಹಗರಣ ಸಂಬಂಧ ವಿರೋಧ ಪಕ್ಷಗಳ ಬಳಿ ದಾಖಲೆಗಳಿದ್ದರೆ, ತನಿಖಾ ಸಂಸ್ಥೆಗಳಿಗೆ ನೀಡುವಂತೆ ತಿಳಿಸಿದ್ದಾರೆ.