ಯಡಿಯೂರಪ್ಪ ಆಪ್ತರ ಮೇಲೆಯೇ ಏಕೆ ಐಟಿ ದಾಳಿ, ಇದರ ಹಿಂದೆ ರಾಜಕೀಯ ಇರುವಂತೆ ಕಾಣುತ್ತಿದೆ: ಸಿದ್ದರಾಮಯ್ಯ
ಮೈಸೂರು: ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಹಿಂದೆ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಇಲ್ಲದಿದ್ದರೆ ಬಿ ಎಸ್ ಯಡಿಯೂರಪ್ಪ ಅವರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡುತ್ತಿರುವುದೇಕೆ, ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತೂ ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತದೆ ಎಂದರು.
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಜನರು ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ. ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಆದರೆ ಜನರು ಇದಕ್ಕೆ ಸರಿಯಾಗಿ ಜೆಡಿಎಸ್ ಗೆ ತಿರುಗೇಟು ನೀಡುತ್ತಾರೆ, ರಾಜ್ಯದ ಜನತೆ ಎಲ್ಲವನ್ನೂ ಕುತೂಹಲದಿಂದ ನೋಡುತ್ತಿದ್ದಾರೆ ಎಂದರು.

