'ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?': ಸಿದ್ದರಾಮಯ್ಯ ಕಿಡಿ

ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ' ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

'ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ. ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು? ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು 'ಉತ್ತರ ಕುಮಾರ'ರ ಕಾಲಡಿ ಯಾಕೆ ಅಡವು ಇಡುತ್ತೀರಾ?. ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com